Bidar | ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪ್ರಕರಣಗಳ ರಾಜೀ ಸಂಧಾನಕ್ಕೆ ಅವಕಾಶ: ನ್ಯಾ.ಎಸ್.ಬಿ.ರೆಹಮಾನ್

ಬೀದರ್: ಮುಂಬರುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಆಸ್ತಿಪಾಲು ವಿಭಾಗ, ಸಿವಿಲ್, ಜೀವನಾಂಶ, ಚೆಕ್ ಬೌನ್ಸ್, ವಿದ್ಯುತ್, ರಾಜಿ ಮಾಡಿಕೊಳ್ಳಬಹುದಾದ ಅಪರಾಧಿಕ, ಕೌಟುಂಬಿಕ, ಕಂದಾಯ, ಕಾರ್ಮಿಕ ಹಾಗೂ ಬ್ಯಾಂಕ್ ಪ್ರಕರಣಗಳು ಸೇರಿದಂತೆ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು ಅವಕಾಶವಿದೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಬಿ.ರೆಹಮಾನ್ ಹೇಳಿದರು.
ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಗುರುವಾರ ಬೃಹತ್ ಲೋಕ ಅದಾಲತ್ ಕುರಿತು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಈ ಬಾರಿಯ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಯಾಗಬಹುದಾದ ಪ್ರಕರಣಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಇತ್ಯರ್ಥಪಡಿಸಲು ಯೋಜನೆ ರೂಪಿಸಲಾಗಿದೆ. ಕಳೆದ ಲೋಕ ಅದಾಲತ್‌ಗಿಂತ ಈ ಬಾರಿ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದರು.
ನವೆಂಬರ್ 11ರ ಅಂಕಿಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 30,536 ಪ್ರಕರಣಗಳು ಬಾಕಿ ಇವೆ. ಇವುಗಳಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು 1,292 ಪ್ರಕರಣಗಳನ್ನು ಗುರುತಿಸಲಾಗಿದೆ. ಇನ್ನೂ ಹೆಚ್ಚಿನ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ಎಲ್ಲ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಾರಿಗೆ ಇಲಾಖೆಯಲ್ಲಿ 1991ರಿಂದ 2025ರ ಅವಧಿಯಲ್ಲಿ ದಾಖಲಾದ ಪ್ರಕರಣಗಳ ದಂಡದ ಮೊತ್ತದ ಮೇಲೆ ಶೇ.50ರಷ್ಟು ವಿನಾಯಿತಿ ನೀಡಲಾಗಿದೆ. ಸಾರ್ವಜನಿಕರು 2026ರ ನವೆಂಬರ್ 21ರಿಂದ ಡಿಸೆಂಬರ್ 11ರೊಳಗೆ ಈ ಸೌಲಭ್ಯವನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ವಿಶೇಷ ಲೋಕ ಅದಾಲತ್ ಅನ್ನು ನವೆಂಬರ್ 21ರಂದು ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಆಯೋಜಿಸಲಾಗಿದೆ. ‘ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 3.0’ ಅಭಿಯಾನವನ್ನು ಆಗಸ್ಟ್ 1ರಿಂದ ಡಿಸೆಂಬರ್ 30ರವರೆಗೆ ಜಿಲ್ಲಾದ್ಯಂತ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ದೇಶಾದ್ಯಂತ ಉಚಿತ ಕಾನೂನು ನೆರವು ಹಾಗೂ ಕಾನೂನು ಸಲಹೆ ಒದಗಿಸಲು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (ನಾಲ್ಸಾ) 15100 ಉಚಿತ ಸಹಾಯವಾಣಿ ಸಂಖ್ಯೆಯನ್ನು ಜಾರಿಗೊಳಿಸಿದೆ. ಈ ಸಹಾಯವಾಣಿ ಮೂಲಕ ಸಾರ್ವಜನಿಕರು ತಮ್ಮ ಕಾನೂನು ಸಮಸ್ಯೆಗಳ ಕುರಿತು ಮಾರ್ಗದರ್ಶನ, ಉಚಿತ ಕಾನೂನು ಸಲಹೆ ಹಾಗೂ ಕಾನೂನು ನೆರವು ಪಡೆಯಲು ಅರ್ಹತೆ ಇದೆಯೇ ಎಂಬ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಉಪಾಧ್ಯೆ ಮತ್ತು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಂಜಯ ಮಠಪತಿ ಉಪಸ್ಥಿತರಿದ್ದರು.






