Bidar | ಶಾಂತಿಯುತವಾಗಿ ಜರುಗಿದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ನೇಮಕಾತಿ ಪರೀಕ್ಷೆ

ಬೀದರ್: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಭಾನುವಾರ ಬೀದರ್ ನಗರದಲ್ಲಿ ನಡೆದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಯಾವುದೇ ಅಡಚಣೆಗಳಿಲ್ಲದೆ ಸುಗಮ ಹಾಗೂ ಶಾಂತಿಯುತವಾಗಿ ನಡೆಯಿತು.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಲಿಂಗರಾಜ ಅಪ್ಪಾ ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆ, ಅಭ್ಯರ್ಥಿಗಳಿಗೆ ಕಲ್ಪಿಸಲಾದ ಸೌಲಭ್ಯಗಳು ಹಾಗೂ ಅಕ್ರಮ ತಡೆಗೆ ಕೈಗೊಂಡ ಕ್ರಮಗಳನ್ನು ಪರಿಶೀಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಕೂಡ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳನ್ನು ಅವಲೋಕಿಸಿದರು.
ನಗರದಲ್ಲಿ ಒಟ್ಟು 17 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 10,627 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 9,994 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 663 ಅಭ್ಯರ್ಥಿಗಳು ಗೈರಾಗಿದ್ದರು.
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಮೊಬೈಲ್ ಜಾಮರ್‌ಗಳನ್ನು ಅಳವಡಿಸಲಾಗಿತ್ತು. ಅಕ್ರಮ ತಡೆಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಅಭ್ಯರ್ಥಿಗಳ ಅನುಕೂಲಕ್ಕಾಗಿ ಮಾಹಿತಿ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಲಾಗಿತ್ತು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಹಾಗೂ ಮಾರ್ಗಗಳಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ಪರೀಕ್ಷೆ ಯಾವುದೇ ಗೊಂದಲಗಳಿಲ್ಲದೆ ಯಶಸ್ವಿಯಾಗಿ ನೆರವೇರಿತು.






