Bidar | ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ರವಿ ಹಂಜ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಬೀದರ್: ಬಸವಣ್ಣನವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ರವಿ ಹಂಜ್ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು.
ನಗರದ ಬಸವೇಶ್ವರ ವೃತ್ತದ ಬಳಿ ಗುರುವಾರ ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ಬಸವಪರ ಸಂಘಟನೆಗಳ ನೇತೃತ್ವದಲ್ಲಿ ತೀವ್ರ ಪ್ರತಿಭಟನೆ ನಡೆಯಿತು. ಬಸವಣ್ಣನವರ ಕುರಿತು ಮಾಡಿರುವ ಅವಹೇಳನಕಾರಿ ಹೇಳಿಕೆಗಳನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಿಶ್ವಗುರು ಬಸವಣ್ಣನವರು ಕೇವಲ ಒಂದು ಸಮುದಾಯದ ಗುರುಗಳಲ್ಲ. ಸಮಾನತೆ, ಕಾಯಕ, ದಾಸೋಹ, ಮಾನವೀಯತೆ ಮತ್ತು ಸಾಮಾಜಿಕ ನ್ಯಾಯದ ಮೂಲಕ ಜಗತ್ತಿಗೆ ಬೆಳಕು ನೀಡಿದ ಮಹಾನ್ ದಾರ್ಶನಿಕರಾಗಿದ್ದಾರೆ. ಅವರ ವ್ಯಕ್ತಿತ್ವ ಮತ್ತು ವಿಚಾರಧಾರೆಗೆ ಧಕ್ಕೆ ತರುವ ಯಾವುದೇ ರೀತಿಯ ಅವಹೇಳನವನ್ನು ಬಸವಪರ ಸಂಘಟನೆಗಳು ಸಹಿಸುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಬಸವಣ್ಣನವರಿಗೆ ಅವಮಾನ ಮಾಡಿದ್ದಾರೆ ಎನ್ನಲಾದ ರವಿ ಹಂಜ್ ಪ್ರಕಟಿಸಿರುವ ‘ಬಸವ ಮಂಟಪ’ ಕೃತಿಯನ್ನು ಕರ್ನಾಟಕ ಸರ್ಕಾರ ನಿಷೇಧಿಸಬೇಕು. ಅಲ್ಲದೆ, ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬಸವಣ್ಣನವರಿಗೆ ಅವಮಾನ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ರವಿ ಹಂಜ್ ಅವರಿಗೆ ಕರ್ನಾಟಕ ರಾಜ್ಯ ಪ್ರವೇಶ ನಿರ್ಬಂಧಿಸುವ ಕುರಿತು ಸಂಬಂಧಪಟ್ಟ ಸರ್ಕಾರ ಕಾನೂನುಬದ್ಧವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಅವರ ಪಾಸ್‌ಪೋರ್ಟ್ ಜಪ್ತಿ ಹಾಗೂ ಅಮಾನತುಗೊಳಿಸುವ ಸಾಧ್ಯತೆಯನ್ನೂ ಪರಿಶೀಲಿಸಬೇಕು. ಜೊತೆಗೆ ಆಕ್ಷೇಪಾರ್ಹ ಹೇಳಿಕೆಗಳಿರುವ ಸಾಮಾಜಿಕ ಜಾಲತಾಣಗಳ ಖಾತೆಗಳಿಗೆ ನಿರ್ಬಂಧ ವಿಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯ ಬಳಿಕ ನ್ಯೂ ಟೌನ್ ಪೊಲೀಸ್ ಠಾಣೆಗೆ ತೆರಳಿದ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ರವಿ ಹಂಜ್ ವಿರುದ್ಧ ಸಾಮೂಹಿಕವಾಗಿ ದೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ಡಾ. ಚೆನ್ನಬಸವಾನಂದ ಸ್ವಾಮೀಜಿ, ಬಸವಕಲ್ಯಾಣದ ಬಸವಪ್ರಭು ಸ್ವಾಮಿ, ಜಾಗತಿಕ ಲಿಂಗಾಯತ ಮಹಾಸಭಾದ ಬಸವರಾಜ್ ಧನ್ನೂರ್, ಶಿವಶರಣಪ್ಪ ಹುಗ್ಗೆ ಪಾಟೀಲ್, ಸೋಮಶೇಖರ್ ಪಾಟೀಲ್ ಗಾದಗಿ, ರಾಜೇಂದ್ರ ಜೋನ್ನಿಕೇರಿ, ಸತ್ಯದೇವಿ ಮಾತಾಜಿ, ಮಲ್ಲಮ್ಮ ಪಾಟೀಲ್, ಪ್ರವೀಣ್ ಏಕಲಾರೆ, ರವಿ ಪಾಪಡೆ, ಹಾವಶೆಟ್ಟಿ ಪಾಟೀಲ್ ಹಾಗೂ ಯೋಗೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.






