Bidar | ರವಿ ಹುಂಜ ಬಂಧನ, ‘ಬಸವ ಮಂಟಪ’ ಕೃತಿ ನಿಷೇಧಕ್ಕೆ ಆಗ್ರಹಿಸಿ ನ.19 ರಂದು ಪ್ರತಿಭಟನೆ : ಬಸವರಾಜ್ ಧನ್ನೂರ್

ಬೀದರ್: ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ಪ್ರಾಮಾಣಿಕತೆ ಹಾಗೂ ವಚನ ಸಾಹಿತ್ಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ರವಿ ಹುಂಜ ಅವರನ್ನು ಕೂಡಲೇ ಬಂಧಿಸಬೇಕು. ಅವರ ‘ಬಸವ ಮಂಟಪ’ ಕೃತಿಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ನ. 19ರಂದು ನಗರದ ಬಸವೇಶ್ವರ ವೃತ್ತದಲ್ಲಿ ವಿವಿಧ ಬಸವಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಬಸವರಾಜ್ ಧನ್ನೂರ್ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರ ಕುರಿತು ರವಿ ಹುಂಜ ನೀಡಿರುವ ಹೇಳಿಕೆಗಳು ದೇಶ-ವಿದೇಶಗಳಲ್ಲಿರುವ ಬಸವಭಕ್ತರ ಭಾವನೆಗಳಿಗೆ ತೀವ್ರ ನೋವುಂಟು ಮಾಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಒಂದೆರಡು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಬಸವ ತತ್ವ, ಲಿಂಗಾಯತ ಧರ್ಮ, ಬಸವಾದಿ ಶರಣರು, ಮಠಾಧೀಶರು ಹಾಗೂ ಬಸವಪರ ಹೋರಾಟಗಾರರ ವಿರುದ್ಧ ರವಿ ಹುಂಜ ಲೇಖನಗಳನ್ನು ಪ್ರಕಟಿಸುತ್ತಿದ್ದಾರೆ. ತಮ್ಮ ಲೇಖನಗಳನ್ನು ಸಂಗ್ರಹಿಸಿ ಸುಮಾರು 600 ಪುಟಗಳ ‘ಬಸವ ಮಂಟಪ’ ಕೃತಿಯನ್ನು ಹೊರತಂದಿದ್ದಾರೆ. ನ. 15ರಂದು ಬೆಂಗಳೂರಿನ ಎಫ್‌ಕೆಸಿಸಿಐ ಸಭಾಂಗಣದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭಕ್ಕೂ ಮುನ್ನ ನೀಡಿದ ಮಾಧ್ಯಮ ಸಂದರ್ಶನದಲ್ಲಿ ಬಸವಣ್ಣನವರ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದರು.
ರವಿ ಹುಂಜ ಅವರ ‘ಬಸವ ಮಂಟಪ’ ಕೃತಿಯಲ್ಲಿ ಬಸವ ತತ್ವದ ಪ್ರಚಾರಕರು, ಮಠಾಧೀಶರು ಹಾಗೂ ಲಿಂಗಾಯತ ಧರ್ಮದ ಮಾನ್ಯತೆಗಾಗಿ ಹೋರಾಟ ನಡೆಸಿದ ಅನೇಕ ಮುಖಂಡರ ವಿರುದ್ಧ ಅವಹೇಳನಕಾರಿ ಬರಹಗಳಿವೆ ಎಂದು ಆರೋಪಿಸಿದ ಅವರು, ಕೃತಿಯಲ್ಲಿರುವ ಆಕ್ಷೇಪಾರ್ಹ ಅಂಶಗಳನ್ನು ಪರಿಶೀಲಿಸಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪುಸ್ತಕ ನಿಷೇಧಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿ, ರವಿ ಹುಂಜ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ನ. 19ರಂದು ಗುರುವಾರ ನಗರದ ಬಸವೇಶ್ವರ ವೃತ್ತದಲ್ಲಿ ವಿವಿಧ ಬಸವಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಗುವುದು. ರವಿ ಹುಂಜ ಅವರ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ದಹಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಈ ಪ್ರಕರಣದಲ್ಲಿ ಸ್ವಯಂಪ್ರೇರಿತವಾಗಿ ಕಾನೂನು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಡಾ. ಚನ್ನಬಸವಾನಂದ ಸ್ವಾಮೀಜಿ, ಬಸವಪ್ರಭು ಸ್ವಾಮೀಜಿ, ಸಿದ್ಧರಾಮ ಶರಣರು ಬೆಲ್ದಾಳ, ಬಸವರಾಜ್ ಬುಳ್ಳಾ, ಬಾಬು ವಾಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.






