Bidar | ಕಾರಂಜಾ ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್‌ಗೆ ಲಕ್ಷ್ಮಣ ದಸ್ತಿ ಆಗ್ರಹ

ಬೀದರ್: ಕಾರಂಜಾ ನೀರಾವರಿ ಯೋಜನೆಯಿಂದ ಭೂಮಿ ಕಳೆದುಕೊಂಡಿರುವ ಸಂತ್ರಸ್ತರ ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಮಗ್ರ ಮಾಹಿತಿ ಇರುವುದರಿಂದ ಆದಷ್ಟು ಬೇಗ ಪರಿಹಾರ ಹಣ ಬಿಡುಗಡೆ ಮಾಡಬೇಕು ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಆಗ್ರಹಿಸಿದರು.
ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಹಾಗೂ ಬೀದರ್ ಸಮಗ್ರ ಅಭಿವೃದ್ಧಿ ಜಂಟಿ ಕ್ರಿಯಾ ಸಮಿತಿ ವತಿಯಿಂದ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರಂಜಾ ಯೋಜನೆಗಾಗಿ ಸುಮಾರು 28 ಗ್ರಾಮಗಳ ರೈತರು ಯಾವುದೇ ಷರತ್ತಿಲ್ಲದೆ ಭೂಮಿ ನೀಡಿದ್ದಾರೆ. ಆದರೆ ಸೂಕ್ತ ಪರಿಹಾರಕ್ಕಾಗಿ ವರ್ಷಗಳ ಕಾಲ ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
2018ರಲ್ಲಿ 70 ದಿನಗಳ ಹೋರಾಟದ ಬಳಿಕ ಅಂದಿನ ಸರ್ಕಾರ ಭರವಸೆ ನೀಡಿತ್ತು. ನಂತರವೂ ಸಮಸ್ಯೆ ಬಗೆಹರಿಯದ ಕಾರಣ 926 ದಿನಗಳ ಕಾಲ ನಿರಂತರ ಧರಣಿ ಸತ್ಯಾಗ್ರಹ ನಡೆಸಲಾಗಿದೆ ಎಂದು ತಿಳಿಸಿದರು.
ಅಂದಿನ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಈಶ್ವರ್ ಖಂಡ್ರೆ ಹಾಗೂ ಜಿಲ್ಲೆಯ ಶಾಸಕರು ಕಾರಂಜಾ ಸಂತ್ರಸ್ತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಇದೀಗ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಿರುವ ಹಿನ್ನೆಲೆಯಲ್ಲಿ ತಮ್ಮ ಮಾತಿನಂತೆ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಕಾರಂಜಾ ಸಂತ್ರಸ್ತರ ಪರಿಹಾರವನ್ನು ಬೀದರ್ ಜಿಲ್ಲೆಯ ವಿಶೇಷ ಗ್ಯಾರಂಟಿ ಎಂದು ಪರಿಗಣಿಸಿ ಶೀಘ್ರ ಕ್ರಮ ಕೈಗೊಳ್ಳಬೇಕು. ಜೊತೆಗೆ ಜಿಲ್ಲಾಡಳಿತ ಕಚೇರಿಯಲ್ಲಿನ ಭೂ ಸ್ವಾಧೀನಾಧಿಕಾರಿ ಹುದ್ದೆಯನ್ನು ತಕ್ಷಣ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಂತ್ರಸ್ತರಿಗೆ ಪರಿಹಾರ ದೊರಕುವಂತೆ ವಿಶೇಷ ಮುತುವರ್ಜಿ ವಹಿಸಬೇಕು ಎಂದು ಮನವಿ ಮಾಡಿದರು.
15 ದಿನಗಳೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಜಿಲ್ಲಾದ್ಯಂತ ಹೋರಾಟ ಆರಂಭಿಸಲಾಗುವುದು ಎಂದು ಲಕ್ಷ್ಮಣ ದಸ್ತಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಮತ್ತು ಬೀದರ್ ಸಮಗ್ರ ಅಭಿವೃದ್ಧಿ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಪಾಟೀಲ್ ಹೋಚಕನಳ್ಳಿ, ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಚಾಲಕ ವಿನಯಕುಮಾರ್ ಮಾಳಗೆ, ಮಲ್ಲಿನಾಥ್ ಕಲಬುರಗಿ, ಕಾರಂಜಾ ಮುಳುಗಡೆ ಸಂತ್ರಸ್ತರಾದ ರಾಜಪ್ಪಾ ಕಮಲಪುರ್, ಡಾ. ರಾಜಕುಮಾರ್ ಬುಸ್ಸಾ, ಸಂಗಾರೆಡ್ಡಿ, ವೀರೇಂದ್ರ ಮರಕಲ್, ಮಾದಪ್ಪ ಕೌದೆ, ಲಕ್ಷ್ಮೀಬಾಯಿ, ಕೆ. ಅಹ್ಮದ್ ಬಗದಲ್, ಯೂಸೂಫ್ ಮಿಯಾ, ಬಸವರಾಜ್ ಹಿಂದಾ, ಮಾಣಿಕಪ್ಪ ನೆಲವಾರ್, ಪ್ರಭುರಾವ್ ತೂಗಾಂವ್ ಹಾಗೂ ಶಂಕರೆಪ್ಪ ನಾರಾ ಸೇರಿದಂತೆ ಇತರರು ಉಪಸ್ಥಿತರಿದ್ದರು.






