Bidar | ಸೆ.17 ರಂದು ಕಲಬುರಗಿಯಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ : ಪಂಡಿತರಾವ್ ಚಿದ್ರಿ

ಬೀದರ್: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ರಾಯಚೂರು ವತಿಯಿಂದ ಸೆಪ್ಟೆಂಬರ್ 17ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಶರಣಬಸವೇಶ್ವರ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ ಆಯೋಜಿಸಲಾಗಿದ್ದು, ಜಿಲ್ಲೆಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಮಿತಿಯ ಕಾರ್ಯಾಧ್ಯಕ್ಷ ಪಂಡಿತರಾವ್ ಚಿದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಯಾವ ಉದ್ದೇಶಕ್ಕಾಗಿ ಸ್ಥಾಪನೆಯಾಗಿತ್ತೋ, ಆ ಉದ್ದೇಶ ಸಂಪೂರ್ಣವಾಗಿ ಈಡೇರಿಲ್ಲ ಎಂದು ಅವರು ಆರೋಪಿಸಿದರು. ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯವಿರುವ ಶಿಕ್ಷಣ, ಆರೋಗ್ಯ, ಉದ್ಯೋಗ, ನೀರಾವರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಮಾವೇಶದಲ್ಲಿ ಚರ್ಚಿಸಿ ಸರ್ಕಾರದ ಮುಂದೆ ಹಲವು ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗವು ರಾಜ್ಯದ ಇತರೆ ಪ್ರದೇಶಗಳಂತೆ ಅಭಿವೃದ್ಧಿ ಹೊಂದುವ ನಿಟ್ಟಿನಲ್ಲಿ ಸ್ಪಷ್ಟ ಕಾರ್ಯಯೋಜನೆ ರೂಪಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಸಮಾವೇಶದಲ್ಲಿ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.
ವಿದ್ಯಾರ್ಥಿಗಳು, ಯುವಕರು, ರೈತರು, ಕಾರ್ಮಿಕರು, ದಲಿತರು, ಅಲ್ಪಸಂಖ್ಯಾತರು, ಮಹಿಳೆಯರು ಹಾಗೂ ಎಲ್ಲ ವರ್ಗದ ಜನರು ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಸಮಾವೇಶದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಪಂಡಿತರಾವ್ ಚಿದ್ರಿ ಕರೆ ನೀಡಿದರು.






