ಬೀದರ್ | ಕಬ್ಬಿಗೆ ಸೂಕ್ತ ಬೆಲೆ ನಿಗದಿಗೆ ಆಗ್ರಹಿಸಿ ಮನವಿ

ಬೀದರ್ : ರಾಜ್ಯದ ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ದೊರಕಿಸಿಕೊಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಚುನ್ನಪ್ಪ ಪೂಜಾರಿ ಅವರು ಸಂಪೂರ್ಣ ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನಲೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಬಣ) ಬೀದರ್ ಜಿಲ್ಲಾ ಘಟಕ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಮನವಿ ಪತ್ರ ಸಲ್ಲಿಸಿದೆ.
ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಸಲ್ಲಿಸಿದ ಮನವಿಯಲ್ಲಿ, ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಪ್ರತಿ ಟನ್ ಕಬ್ಬಿಗೆ 5,500 ರೂ. ಬೆಲೆ ನಿಗದಿಪಡಿಸಬೇಕು. ಕೃಷಿ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಕಬ್ಬಿನ ಬೆಳೆಯಿಂದ ನ್ಯಾಯಯುತ ಆದಾಯ ದೊರೆಯುವಂತೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.
ರೈತರ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಬೀದಿಗಿಳಿದು ತೀವ್ರ ಹೋರಾಟ ನಡೆಸಲಾಗುವುದು ಎಂದು ಸಂಘದ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ್ ಸ್ವಾಮಿ ಸಿರ್ಸಿ, ಜಿಲ್ಲಾ ಗೌರವಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾಧ್ಯಕ್ಷ ಶ್ರೀಮಂತ್ ಬಿರಾದಾರ್, ಹಸಿರು ಸೇನೆಯ ಅಧ್ಯಕ್ಷ ನೀಲಕಂಠ್ ಬುಯ್ಯಾ, ಜಿಲ್ಲಾ ಉಪಾಧ್ಯಕ್ಷ ಶಂಕರಪ್ಪ ಪಾರಾ, ರಾಜ್ಯ ಮಹಿಳಾ ಕಾರ್ಯದರ್ಶಿ ಶೋಭಾವತಿ ಕಾರಭಾರಿ, ರೈತ ಮುಖಂಡರಾದ ಸಂತೋಷ್ ವಲ್ಲಪೆ, ಸುಮಂತ್ ಗ್ರಾಮಲೆ, ವೀರಶೆಟ್ಟಿ ಬಿರಾದಾರ್, ಬಸಪ್ಪ ಮಳಗೆ, ಬಾಬು ಮಳಗೆ, ವೆಂಕಟರಾವ್ ವಲ್ಲಪೆ ಹಾಗೂ ಬಂಡೆಪ್ಪ ಕಮಠಾಣೆ ಸೇರಿದಂತೆ ಮತ್ತಿತರರು ಬೆಂಬಲ ವ್ಯಕ್ತಪಡಿಸಿದ್ದಾರೆ.






