Bidar | ಸೆ.19, 20ರಂದು ಮತದಾರರ ಪಟ್ಟಿ ಪರಿಷ್ಕರಣೆಗಾಗಿ ವಿಶೇಷ ಮಿಂಚಿನ ಅಭಿಯಾನ

ಸಾಂದರ್ಭಿಕ ಚಿತ್ರ
ಬೀದರ್: ಜಿಲ್ಲಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ ಸೆ.19 ಮತ್ತು ಸೆ.20ರಂದು ವಿಶೇಷ ಮಿಂಚಿನ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಸಂಬಂಧ ಆ.24ರಿಂದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸುವ ಕಾರ್ಯ ಆರಂಭವಾಗಿದೆ. ಈ ಅವಧಿಯಲ್ಲಿ ಅರ್ಹ ಮತದಾರರಿಂದ ಸಲ್ಲಿಕೆಯಾಗುವ ನಮೂನೆ-6, ನಮೂನೆ-7 ಹಾಗೂ ನಮೂನೆ-8 ಅರ್ಜಿಗಳನ್ನು ಸ್ವೀಕರಿಸಲು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ವಿಶೇಷ ಮಿಂಚಿನ ಅಭಿಯಾನ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್ಓ) ಮೂಲಕ ಈ ಅಭಿಯಾನ ನಡೆಯಲಿದ್ದು, ಅರ್ಹ ಮತದಾರರು ತಮ್ಮ ವ್ಯಾಪ್ತಿಯ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು.
ನಮೂನೆ-6ರ ಮೂಲಕ ಹೊಸ ಮತದಾರರ ಹೆಸರು ಸೇರ್ಪಡೆ, ನಮೂನೆ-7ರ ಮೂಲಕ ಹೆಸರು ತೆಗೆದುಹಾಕುವಿಕೆ ಹಾಗೂ ನಮೂನೆ-8ರ ಮೂಲಕ ಹೆಸರು, ವಿಳಾಸ ಸೇರಿದಂತೆ ಇತರೆ ವಿವರಗಳ ತಿದ್ದುಪಡಿಯನ್ನು ಮಾಡಿಕೊಳ್ಳಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಅರ್ಹ ಮತದಾರರು ಈ ವಿಶೇಷ ಮಿಂಚಿನ ಅಭಿಯಾನದ ಸದುಪಯೋಗ ಪಡೆದು ಮತದಾರರ ಪಟ್ಟಿಯಲ್ಲಿನ ಅಗತ್ಯ ಸೇರ್ಪಡೆ, ತಿದ್ದುಪಡಿ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.






