Bidar | ಜಿಲ್ಲೆಯಿಂದ ವಲಸೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ

ಬೀದರ್: ಜಿಲ್ಲೆಯಲ್ಲಿ ಯಾವುದೇ ವ್ಯಕ್ತಿ ವಲಸೆ (ಗೊಳೆ) ಹೋಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ವಲಸೆ ಪ್ರಕರಣಗಳು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಪ್ರಕೃತಿ ವಿಕೋಪ ಮೇಲುಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಕುಡಿಯುವ ನೀರಿನ ಸಮಸ್ಯೆಗಳು, ವಿಬಿ-ಜಿ ರಾಮ್‌ಜಿ ಹಾಗೂ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಬಿ-ಜಿ ರಾಮ್‌ಜಿ ಯೋಜನೆಯಡಿ ವೈಯಕ್ತಿಕ ಹಾಗೂ ಗುಂಪು ಆಧಾರಿತ ಮಾನವ ದಿನಗಳನ್ನು ಸೃಷ್ಟಿಸಲು ಸಾಕಷ್ಟು ಅವಕಾಶಗಳಿದ್ದು, ಕೆಲಸಕ್ಕಾಗಿ ಬರುವವರಿಗೆ ತಕ್ಷಣ ಉದ್ಯೋಗ ಒದಗಿಸಿ ಜಾಬ್ ಕಾರ್ಡ್ ನೀಡಬೇಕು. ಇದರಿಂದ ವಲಸೆ ತಡೆಯಲು ಸಾಧ್ಯವಾಗಲಿದೆ ಎಂದು ಹೇಳಿದರು.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಲ್ಲಿ ಅಗತ್ಯ ಪುಸ್ತಕಗಳು ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು. ಜಿಲ್ಲೆಯಲ್ಲಿ 644 ಗ್ರಾಮಗಳನ್ನು ‘ಹರ್ ಘರ್ ಜಲ್’ ಗ್ರಾಮಗಳೆಂದು ಘೋಷಿಸಲಾಗಿದ್ದು, ಅದು ಕೇವಲ ಘೋಷಣೆಗೆ ಸೀಮಿತವಾಗದೆ ಪ್ರತಿಯೊಂದು ಮನೆಗೂ ನಿರಂತರ ಕುಡಿಯುವ ನೀರು ಪೂರೈಕೆಯಾಗುತ್ತಿರುವುದನ್ನು ತಾಲೂಕು ಪಂಚಾಯಿತಿ ಇಒಗಳು ಹಾಗೂ ತಹಶೀಲ್ದಾರರು ಜಂಟಿಯಾಗಿ ಪರಿಶೀಲಿಸಬೇಕು ಎಂದು ಸೂಚಿಸಿದರು.
ಪ್ರತಿ ಘೋಷಿತ ಗ್ರಾಮಕ್ಕೆ ಭೇಟಿ ನೀಡಿ ಮನೆ ಮನೆಗೂ ನೀರು ತಲುಪುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಸಮಸ್ಯೆಗಳಿದ್ದರೆ 15 ದಿನಗಳೊಳಗೆ ಅವುಗಳನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ಗಡುವು ನೀಡಿದರು.
ಜಿಲ್ಲೆಯಲ್ಲಿ ಡಿಎಪಿ ಸೇರಿದಂತೆ ರಸಗೊಬ್ಬರದ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಬೆಳೆ ವಿಮೆ ನೋಂದಣಿಗಾಗಿ ಬರುವ ರೈತರನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಬಾರದು. ಲೀಡ್ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಮನ್ವಯ ಸಭೆ ನಡೆಸಿ ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.
‘ಗ್ರಾಮ ಒನ್’ ಕೇಂದ್ರಗಳಲ್ಲಿ ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಂತಹ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಕ್ರಮ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಈಶ್ವರ್ ಖಂಡ್ರೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.






