ಬೀದರ್ | ವಿವಿಧ ಕಳ್ಳತನ ಪ್ರಕರಣ ; 5 ಆರೋಪಿಗಳ ಬಂಧನ : ಎಸ್ಪಿ ಪ್ರದೀಪ್ ಗುಂಟಿ

ಬೀದರ್ : ಗಾಂಧಿಗಂಜ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಒಟ್ಟು 8 ವಿವಿಧ ಪ್ರಕರಣಗಳಲ್ಲಿ 5 ಆರೋಪಿಗಳನ್ನು ಬಂಧಿಸಿ ಸುಮಾರು 30 ಲಕ್ಷ 80 ಸಾವಿರ ರೂ. ಕ್ಕಿಂತ ಹೆಚ್ಚು ಮೌಲ್ಯದ ಬೆಲೆ ಬಾಳುವ ಸ್ವತ್ತನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಹೇಳಿದರು.
ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾ.28 ರಂದು 3 ಮನೆ ಕಳ್ಳತನ ಮಾಡಿದ ಒಬ್ಬ ಆರೋಪಿಯನ್ನು ಬಂಧಿಸಿ ಸುಮಾರು 35 ಗ್ರಾಂ ಚಿನ್ನ, 500 ಗ್ರಾಂ ಬೆಳ್ಳಿ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಒಂದು ಬೈಕ್ ಹೀಗೆ ಒಟ್ಟು ಸುಮಾರು 4 ಲಕ್ಷ ರೂ. ಮೌಲ್ಯದ ಮುದ್ದೆ ಮಾಲು ಜಪ್ತಿ ಮಾಡಲಾಗಿದೆ. ಹಾಗೆಯೇ ಎ.27 ರಂದು ಸರಗಳ್ಳತನ ಪ್ರಕರಣಕ್ಕೆ ಸಂಬಂಧಿದಂತೆ ಒಬ್ಬ ಆರೋಪಿಯನ್ನು ಬಂಧಿಸಿದ್ದು, ಸುಮಾರು 140 ಗ್ರಾಂ ಚಿನ್ನದ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ ಸ್ಪೇಂಡರ್ ಬೈಕ್ ಸೇರಿದಂತೆ ಒಟ್ಟು ಸುಮಾರು 11 ಲಕ್ಷ 90 ಸಾವಿರ ರೂ. ಮೌಲ್ಯದ ವಸ್ತು ಜಪ್ತಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಓಲ್ಡ್ ಆದರ್ಶ ಕಾಲೋನಿಯಲ್ಲಿನ ಮನೆ ದರೋಡೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಮೇ.2 ರಂದು ತಪಾಸಣೆ ಮಾಡಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಓಡಿ ಹೋಗುವಾಗ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಮೇ.1 ರಂದು ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿಯನ್ನು ಮಹಾರಾಷ್ಟ್ರದ ಪುನಾದಲ್ಲಿ ಬಂಧಿಸಲಾಗಿದೆ. ನಂತರದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ ಸುಮಾರು 132 ಗ್ರಾಂ ಚಿನ್ನ, 480 ಗ್ರಾಂ ಬೆಳ್ಳಿ, ಕೃತ್ಯಕ್ಕೆ ಬಳಸಿದ ಒಂದು ಮಾರುತಿ ಇಕೋ ವಾಹನ ಹಾಗೂ ಝರಾ ನಕಲಿ ಬಂದೂಕು ಹೀಗೆ ಒಟ್ಟು 14 ಲಕ್ಷ 90 ಸಾವಿರ ರೂ. ಕ್ಕಿಂತ ಹೆಚ್ಚು ಬೆಲೆ ಬಾಳುವ ವಸ್ತು ಜಪ್ತಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸುಮಾರು 30 ಲಕ್ಷ 80 ಸಾವಿರ ರೂ. ಕ್ಕಿಂತ ಹೆಚ್ಚು ಮೌಲ್ಯದ ಬೆಲೆ ಬಾಳುವ ಸ್ವತ್ತನ್ನು ಜಪ್ತಿ ಮಾಡಲಾಗಿದ್ದು, ಬಂಧಿತ 5 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ ಸೇರಿದಂತೆ ಇತರ ಪೊಲೀಸ್ ಸಿಬ್ಬಂದಿ ಹಾಜರಿದ್ದರು.







