Bidar | ಶಿಕ್ಷಕರ ಕ್ಷೇತ್ರದಲ್ಲಿ ಶರಣಪ್ಪ ಮಟ್ಟೂರ್‌ಗೆ ಬೆಂಬಲದ ಅಲೆ : ಸಚಿವ ಈಶ್ವರ್ ಖಂಡ್ರೆ ವಿಶ್ವಾಸ
"ನಾಡಿನ ಅನ್ನದಾತರಿಗೆ ಕೇಂದ್ರ ಅನ್ಯಾಯ ಮಾಡಿದೆ"

ಬೀದರ್: ಶಿಕ್ಷಕರು ಬುದ್ಧಿವಂತರಾಗಿದ್ದು, ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ್ ಅವರಿಗೆ ಬೆಂಬಲ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದ ಶರಣಪ್ಪ ಮಟ್ಟೂರ್ ಪರವಾಗಿ ಪ್ರಚಾರ ನಡೆಸಲಾಗುತ್ತಿದೆ. ಎಲ್ಲ ಕಡೆಗಳಲ್ಲಿಯೂ ಮಟ್ಟೂರ್ ಪರ ಅಲೆ ಕಂಡುಬರುತ್ತಿದೆ. ನಮ್ಮ ಸರ್ಕಾರ ಮೂರೂವರೆ ವರ್ಷಗಳಲ್ಲಿ ಉತ್ತಮ ಆಡಳಿತ ನೀಡಿದ್ದು, ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿದೆ. ಹೀಗಾಗಿ ಜನರ ಒಲವು ಕಾಂಗ್ರೆಸ್ ಪಕ್ಷದ ಕಡೆಗಿದೆ ಎಂದರು.
ಬೀದರ್ ಜಿಲ್ಲೆಯಲ್ಲಿ ಸುಮಾರು 7 ಸಾವಿರ ಶಿಕ್ಷಕ ಮತದಾರರು ಹಾಗೂ 33 ಮತಗಟ್ಟೆಗಳಿವೆ. ಜಿಲ್ಲೆಯ ಶಿಕ್ಷಕ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ವಿಶ್ವಾಸವಿದೆ. ಶಿಕ್ಷಕರ ಸಮಸ್ಯೆಗಳನ್ನು ವಿಧಾನ ಪರಿಷತ್ತಿನಲ್ಲಿ ಚರ್ಚಿಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಶಿಕ್ಷಕರ ಕ್ಷೇತ್ರವನ್ನು ಮೀಸಲಿಡಲಾಗಿದೆ. ಈ ಅವಕಾಶವನ್ನು ಕಲ್ಪಿಸಿದ್ದು ಕಾಂಗ್ರೆಸ್ ಪಕ್ಷ. ಶರಣಪ್ಪ ಮಟ್ಟೂರ್ ಅವರು ಕೂಡ ಶಿಕ್ಷಕರ ಸಮಸ್ಯೆಗಳ ಕುರಿತು ಧ್ವನಿ ಎತ್ತಿದ್ದಾರೆ. ಆದ್ದರಿಂದ ಶಿಕ್ಷಕರ ಹಾಗೂ ಶೈಕ್ಷಣಿಕ ಅಭಿವೃದ್ಧಿಯ ದೃಷ್ಟಿಯಿಂದ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಎಲ್ಲ ಸಮುದಾಯಗಳಿಗೂ ಮನ್ನಣೆ ದೊರೆಯುವಂತೆ ಪಕ್ಷದ ಸಂಘಟನೆಯನ್ನು ಬಲಪಡಿಸಲು ‘ಸಂಘಟನ್ ಸೃಜನ್ ಭಾಗ-2’ ಅಭಿಯಾನ ಆರಂಭಿಸಲಾಗಿದೆ. ಇದರಡಿ ಬ್ಲಾಕ್ ಅಧ್ಯಕ್ಷರು, ಬ್ಲಾಕ್ ಮಟ್ಟದ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ಪ್ರತಿ 10 ಬೂತ್‌ಗಳಿಗೆ ಒಬ್ಬ ಅಧ್ಯಕ್ಷರನ್ನು ಆಯ್ಕೆ ಮಾಡಲು ವೀಕ್ಷಕರು ಜಿಲ್ಲೆಗೆ ಆಗಮಿಸಿದ್ದಾರೆ ಎಂದು ತಿಳಿಸಿದರು.
ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟಗಳಿಗೆ ಕೇಂದ್ರ ಸರ್ಕಾರ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಇದರಿಂದ ರಾಜ್ಯದ ಅನ್ನದಾತರಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಈಶ್ವರ್ ಖಂಡ್ರೆ ಆರೋಪಿಸಿದರು. ಗೊಬ್ಬರ, ಕೂಲಿ, ಇಂಧನ ಸೇರಿದಂತೆ ಕೃಷಿ ಉತ್ಪಾದನಾ ವೆಚ್ಚ ಹೆಚ್ಚಳವಾಗಿದ್ದರೂ ಕಬ್ಬಿನ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಹಾಗೂ ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಅಗತ್ಯಕ್ಕೆ ತಕ್ಕಂತೆ ಹೆಚ್ಚಿಸಿಲ್ಲ ಎಂದರು.
ರಾಜ್ಯ ಸರ್ಕಾರ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ಹೆಚ್ಚುವರಿಯಾಗಿ 50 ರೂ. ನೆರವು ನೀಡಿದೆ. ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿಯೂ ರೈತರಿಗೆ ಗಣನೀಯ ಆರ್ಥಿಕ ನೆರವು ಒದಗಿಸಲಾಗಿತ್ತು. ಎಥೆನಾಲ್ ಉತ್ಪಾದನೆಯಿಂದ ದೊರೆಯುವ ಲಾಭ ರೈತರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಭೆ ನಡೆಸಿ ಸಮಿತಿ ರಚಿಸುವ ಮೂಲಕ ರೈತರಿಗೆ ಭರವಸೆ ನೀಡಿದಂತೆ ಮಾಡಿದ್ದಾರೆ. ಕಬ್ಬು ಹಾಗೂ ಸಕ್ಕರೆಗೆ ಸೂಕ್ತ ಬೆಲೆ ನಿಗದಿಪಡಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯ ಸಮಗ್ರ ಅಭಿವೃದ್ಧಿ, ರೈತರಿಗೆ ಗುಣಮಟ್ಟದ ವಿದ್ಯುತ್ ಪೂರೈಕೆ, ಬರ ನಿರ್ವಹಣೆ, ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಜನೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಬಾಕಿ ಉಳಿದಿರುವ ಕೂಲಿ ಹಣವನ್ನು 15 ದಿನಗಳೊಳಗೆ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಂಘಟನ್ ಸೃಜನ್ ಅಭಿಯಾನ-2ರ ವೀಕ್ಷಕ ಹಾಗೂ ಮಾಜಿ ಶಾಸಕ ಹಸನಸಾಬ್ ದೋಟಿಹಾಳ್ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ರಾಷ್ಟ್ರವ್ಯಾಪಿ ‘ಸಂಘಟನ್ ಸೃಜನ್’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಮೊದಲ ಹಂತದಲ್ಲಿ ಬೀದರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಅಬ್ದುಲ್ ಮನ್ನಾನ್ ಸೇಠ್ ಅವರನ್ನು ನೇಮಿಸಲಾಗಿದೆ. ಎರಡನೇ ಹಂತದಲ್ಲಿ ಬ್ಲಾಕ್, ಗ್ರಾಮ ಪಂಚಾಯಿತಿ, ವಾರ್ಡ್ ಹಾಗೂ ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಲಾಗುವುದು. ಪ್ರತಿ 10 ಬೂತ್‌ಗಳಿಗೆ ಒಬ್ಬ ಅಧ್ಯಕ್ಷರನ್ನು ಆಯ್ಕೆ ಮಾಡುವ ಉದ್ದೇಶವಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ರಹೀಂ ಖಾನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್, ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್, ಸಂಘಟನ್ ಸೃಜನ್ ಅಭಿಯಾನದ ವೀಕ್ಷಕರಾದ ಜ್ಯೋತಿ ಮದರಿಗಿ ಮತ್ತು ಸುಭಾಷ್ ರಾಠೋಡ್, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಅಮೃತರಾವ್ ಚಿಮಕೋಡೆ, ಪಂಡಿತ್ ಚಿದ್ರಿ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾರ್ಜ್ ಫರ್ನಾಂಡಿಸ್ ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.






