Bidar | ಪತ್ನಿ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಸಾಂದರ್ಭಿಕ ಚಿತ್ರ
ಬೀದರ್: ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಔರಾದ್ (ಎಸ್) ಗ್ರಾಮದ ನಿವಾಸಿ ಅನೀಲಕುಮಾರ್ ಖರ್ತಾಮಾಳ್ಗೆ ಜೀವಾವಧಿ ಶಿಕ್ಷೆಯ ಜೊತೆಗೆ 10 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಪ್ರಕರಣದ ವಿವರಗಳ ಪ್ರಕಾರ, ಲಕ್ಷ್ಮಿ ಎಂಬ ಯುವತಿಯನ್ನು ಅನೀಲಕುಮಾರ್ ಖರ್ತಾಮಾಳ್ಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಆದರೆ, ಮದುವೆಯ ನಂತರ ಲಕ್ಷ್ಮಿಗೆ ನಿನ್ನ ನಡತೆ ಸರಿಯಿಲ್ಲ ಎಂದು ಆರೋಪಿಸಿ ಪತಿ ಹಾಗೂ ಮನೆಯವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹೊಡೆದು-ಬಡಿದು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿತ್ತು.
2023ರ ಜೂನ್ ತಿಂಗಳಲ್ಲಿ ಅನೀಲಕುಮಾರ್ ಖರ್ತಾಮಾಳ್ ತನ್ನ ಪತ್ನಿ ಲಕ್ಷ್ಮಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ್ದನು. ಈ ಸಂಬಂಧ ಬಗದಲ್ ಪೊಲೀಸ್ ಠಾಣೆಯಲ್ಲಿ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಸಾಕ್ಷ್ಯಾಧಾರಗಳ ಕೊರತೆಯಿಂದ 2ನೇ ಮತ್ತು 3ನೇ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಆದರೆ, ಮೊದಲ ಆರೋಪಿ ಅನೀಲಕುಮಾರ್ ಖರ್ತಾಮಾಳ್ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.






