Bidar | ಚಿಮ್ಮೆಗಾಂವ್ ಗ್ರಾಮ ಪಂಚಾಯತ್ಗೆ ಜಿಪಂ ಸಿಇಒ ಭೇಟಿ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ
ಹಂದಿಕೇರಾ, ಮಾಳೇಗಾಂವ್ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸೂಚನೆ

ಬೀದರ್: ಕಮಲನಗರ ತಾಲೂಕಿನ ಚಿಮ್ಮೆಗಾಂವ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಮ್ಮೆಗಾಂವ್, ಹಂದಿಕೇರಾ ಹಾಗೂ ಮಾಳೇಗಾಂವ್ ಗ್ರಾಮಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೌಲಭ್ಯಗಳನ್ನು ಪರಿಶೀಲಿಸಿದರು. ಗ್ರಾಮಸ್ಥರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಚಿಮ್ಮೆಗಾಂವ್ ಗ್ರಾಮದಿಂದ ಹಂದಿಕೇರಾ ಗ್ರಾಮದವರೆಗೆ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿಯನ್ನು ವೀಕ್ಷಿಸಿದ ಅವರು, ಕಾಮಗಾರಿಯಲ್ಲಿ ಗುಣಮಟ್ಟದ ಸಾಮಗ್ರಿಗಳನ್ನು ಬಳಸಬೇಕು. ನಿಗದಿತ ಮಾನದಂಡಗಳಿಗೆ ಅನುಗುಣವಾಗಿ ಉತ್ತಮ ಗುಣಮಟ್ಟದೊಂದಿಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹಂದಿಕೇರಾ ಗ್ರಾಮದಲ್ಲಿ ಈಗಾಗಲೇ ಇರುವ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ, ನೀರೆತ್ತುವ ಯಂತ್ರ ಅಳವಡಿಸುವ ಮೂಲಕ ಒಂದು ವಾರದೊಳಗೆ ನೀರು ಪೂರೈಕೆ ಆರಂಭಿಸುವಂತೆ ಗ್ರಾಮೀಣ ಕುಡಿಯುವ ನೀರು ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ (ಎಇಇ) ಸೂಚಿಸಿದರು.
ಮಾಳೇಗಾಂವ್ ಗ್ರಾಮದಲ್ಲಿರುವ ಎರಡು ಕೊಳವೆಬಾವಿಗಳಿಗೆ ನೀರೆತ್ತುವ ಯಂತ್ರ ಹಾಗೂ ವಿದ್ಯುತ್ ತಂತಿಗಳನ್ನು ಅಳವಡಿಸಿ, ಗ್ರಾಮಸ್ಥರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಕುಡಿಯುವ ನೀರಿನ ಟ್ಯಾಂಕ್ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಿ, ಸಾರ್ವಜನಿಕರಿಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಸಬೇಕು ಎಂದು ಸೂಚಿಸಿದರು.
ಇದೇ ವೇಳೆ ಸಾರ್ವಜನಿಕ ಆಸ್ಪತ್ರೆ ಹಾಗೂ ಡಿಜಿಟಲ್ ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮಗಳಲ್ಲಿ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಕುಡಿಯುವ ನೀರು, ಆರೋಗ್ಯ ಸೇವೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ನಿಗದಿತ ಕಾಲಮಿತಿಯಲ್ಲಿ ಒದಗಿಸಬೇಕು. ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟದ ಬಗ್ಗೆ ವಿಶೇಷ ಗಮನ ಹರಿಸಿ, ಜನರಿಗೆ ಉತ್ತಮ ಸೇವೆ ದೊರೆಯುವಂತೆ ಕಾರ್ಯನಿರ್ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಣಮಂತರಾಯ್ ಕೌಟಗೆ, ಎಇಇ ಮಾರುತಿ ರಾಠೋಡ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜ್ಞಾನೇಶ್ವರ್, ಟಿಸಿ ಅಮರ್, ಟಿಎ ಅರ್ಜುನ್, ವಿನೋದ್, ವಿರುಪಾಕ್ಷ, ಡಿಇಒ ಸಾಗರ್, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.






