ಮಹನೀಯರ ಜಯಂತಿಗಳನ್ನು ವಿಜೃಂಭಣೆಯಿಂದ ಆಚರಿಸಿ : ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ

ಬೀದರ್ : ಸೆ.7 ರಂದು ಶ್ರೀ ಬಹ್ಮಶ್ರೀ ನಾರಾಯಣಗುರು ಜಯಂತಿ ಹಾಗೂ ಸೆ.17 ರಂದು ವಿಶ್ವ ಕರ್ಮ ಜಯಂತಿಗಳು ಕಳೆದ ವರ್ಷದಂತೆ ಈ ವರ್ಷವು ಎಲ್ಲರೂ ಸೇರಿ ವಿಜೃಂಭಣೆಯಿಂದ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ ಅವರು ಹೇಳಿದರು.
ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ಬಹ್ಮಶ್ರೀ ನಾರಾಯಣಗುರು ಜಯಂತಿ ಹಾಗೂ ವಿಶ್ವಕರ್ಮ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗಿರುವ ಹಿನ್ನಲೆಯಲ್ಲಿ ಅತಿವೃಷ್ಠಿಯಾಗಿರುವ ಕಾರಣ ಸೆ.7 ರಂದು ಶ್ರೀ ಬಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಸರಳವಾಗಿ ಜಿಲ್ಲೆಯ ಮತ್ತು ತಾಲೂಕಿನ ಎಲ್ಲಾ ಸರಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಮಹನೀಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲು ತೀರ್ಮಾನಿಸಲಾಗಿದೆ ಎಂದರು.
ಸೆ.17 ರ ಬೆಳಿಗ್ಗೆ 11:30 ಗಂಟೆಗೆ ವಿಶ್ವಕರ್ಮ ಜಯಂತಿಯು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ನಂತರ ಜಿಲ್ಲಾಧಿಕಾರಿ ಕಚೇರಿಯಿಂದ ಮೆರವಣಿಗೆ ನಡೆಯಲಿದೆ. ಅಂದು ಮಧ್ಯಾಹ್ನ 1:30 ಗಂಟೆಗೆ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಈ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ್ ಸಿಂಧೆ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.







