ಬೀದರ್ ನಲ್ಲಿ ಕಾಂಗ್ರೆಸ್ ಪಕ್ಷದಿಂದ ನರೇಗಾ ಬಚಾವ್ ಪ್ರತಿಭಟನೆ

ಬೀದರ್, ಜ.24: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿನ ಬದಲಾವಣೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ಶಿವನಗರದಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ತದನಂತರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಮಾತನಾಡಿ, ಮನರೇಗಾ ಯೋಜನೆಯಿಂದ ಗಾಂಧೀಜಿ ಹೆಸರನ್ನು ತೆಗೆದುಹಾಕಿರುವುದು ಸರಿಯಲ್ಲ. ಮನರೇಗಾ ಯೋಜನೆ ಬದಲಾವಣೆಯು ಬಡವರ ಹಾಗೂ ಒಕ್ಕೂಟ ವ್ಯವಸ್ಥೆಯ ವಿರುದ್ಧದ ಕ್ರಮವಾಗಿದೆ ಎಂದು ಆರೋಪಿಸಿದರು.
ಮನರೇಗಾ ಯೋಜನೆ ಮರುಸ್ಥಾಪಿಸುವವರೆಗೆ ಹಾಗೂ ಬಡವರ ಹಕ್ಕುಗಳಿಗಾಗಿ ಕಾಂಗ್ರೆಸ್ ಪಕ್ಷದ ಹೋರಾಟ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ತಿದ್ದುಪಡಿ ಮಾಡಿದ ಕೇಂದ್ರ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಸಮಿತಿ ತಿಳಿಸಿದೆ.
ಈ ಸಂದರ್ಭದಲ್ಲಿ ಸಚಿವ ರಹೀಂ ಖಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅಮೃತರಾವ್ ಚಿಮಕೋಡೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಂಕರ್ ದೊಡ್ಡಿ ಹಾಗೂ ಸಂಜಯ್ ಜಾಗಿರದಾರ್ ಇತರರು ಉಪಸ್ಥಿತರಿದ್ದರು.







