ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಬೀದರ್‌ನಲ್ಲಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ
ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಲು ಆಗ್ರಹ

ಬೀದರ್: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೋಮವಾರ ಬೀದರ್ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಎನ್‌ಎಸ್‌ಯುಐ ಸಂಘಟನೆಯ ನಾಯಕರು, ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್, ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ಆರೋಪಗಳು ಬಹಿರಂಗವಾಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ಆರೋಪಿಸಿದರು. ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ವಿರೋಧ ಪಕ್ಷಗಳು ಪ್ರಶ್ನೆಗಳನ್ನು ಎತ್ತುತ್ತಿವೆ ಎಂದು ಹೇಳಿದರು.
ಚುನಾವಣಾ ಆಯೋಗದಲ್ಲಿರುವ ಇಬ್ಬರು ಆಯುಕ್ತರು ಕಳೆದ ಹತ್ತು ತಿಂಗಳಲ್ಲಿ ಎಸ್‌ಐಆರ್‌ಗೆ ಸಂಬಂಧಿಸಿದ ಕೆಲವು ನಿರ್ಧಾರಗಳ ಬಗ್ಗೆ ಮುಖ್ಯ ಚುನಾವಣಾ ಆಯುಕ್ತರಿಗೆ ಹಲವು ಬಾರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ವರದಿಗಳನ್ನು ಉಲ್ಲೇಖಿಸಿದ ಅವರು, ಈ ವಿಚಾರದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಪ್ರಜಾಪ್ರಭುತ್ವವನ್ನು ಬಲಪಡಿಸಲು ಚುನಾವಣಾ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ಆರೋಪಗಳ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಿ ಈ ಹಿಂದಿನ ಮತದಾರರ ಪಟ್ಟಿಯನ್ನೇ ಮುಂದುವರಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ಒತ್ತಾಯಿಸಿದರು. ಎಸ್‌ಐಆರ್ ಪ್ರಕ್ರಿಯೆಯ ಕುರಿತು ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಸಂಘಟನೆಗಳ ಹಲವು ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಅಮೃತರಾವ್ ಚಿಮಕೋಡೆ, ಮಾಜಿ ವಿಧಾನ ಪರಿಷತ್ ಸದಸ್ಯ ಕೆ. ಪುಂಡಲೀಕರಾವ್, ಭೀಮಶೇನರಾವ್ ಶಿಂದೆ, ಮುಹಮ್ಮದ್ ಗೌಸ್, ಬಸವರಾಜ್ ಬುಳ್ಳಾ, ಮಕ್ಸುದ್ ಚಂದಾ, ಪಂಡಿತರಾವ್ ಚಿದ್ರಿ, ಶಂಕರರಾವ್ ದೊಡ್ಡಿ ಹಾಗೂ ಸಂಜಯ್ ಜಾಗೀರದಾರ್ ಸೇರಿದಂತೆ ಅನೇಕ ಮಹಿಳೆಯರು, ಯುವಕರು ಭಾಗವಹಿಸಿದ್ದರು.






