10 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಾಣ : ಶಾಸಕ ಪ್ರಭು ಚವ್ಹಾಣರಿಂದ ಶಂಕುಸ್ಥಾಪನೆ

ಔರಾದ್: ತಾಲೂಕಿನ ವನಮಾರಪಳ್ಳಿ ಗ್ರಾಮದಲ್ಲಿ ಸುಮಾರು 10 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳಲಿರುವ ಸುಸಜ್ಜಿತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಪ್ರಭು ಚವ್ಹಾಣ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ವಸತಿ ಶಾಲೆಗೆ ಭೇಟಿ ನೀಡಿದಾಗ ಮಕ್ಕಳು ಎದುರಿಸುತ್ತಿದ್ದ ಸಮಸ್ಯೆಗಳನ್ನು ಕಂಡು ಮನಸ್ಸಿಗೆ ನೋವಾಗಿತ್ತು. ನಮ್ಮ ಮಕ್ಕಳು ಉತ್ತಮ ಪರಿಸರದಲ್ಲಿ ಕಲಿಯಬೇಕು, ವಾಸಿಸಬೇಕು. ಅವರ ಶಿಕ್ಷಣ ಮತ್ತು ಭವಿಷ್ಯಕ್ಕೆ ಯಾವುದೇ ಕೊರತೆಯಾಗಬಾರದು ಎಂಬ ಉದ್ದೇಶದಿಂದ ಈ ಶಾಲೆಯನ್ನು ತರಲಾಗಿದೆ. ಮಕ್ಕಳಿಗಾಗಿ ಸುಂದರ ಹಾಗೂ ಸುಸಜ್ಜಿತ ವಸತಿ ಶಾಲೆ ನಿರ್ಮಾಣವಾಗುತ್ತಿರುವುದು ಸಂತಸದ ಸಂಗತಿಯಾಗಿದೆ. ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಈ ಬೃಹತ್ ವಸತಿ ಶಾಲೆಯು ಕ್ಷೇತ್ರದ ವಿದ್ಯಾರ್ಥಿಗಳಿಗೆ ಸುಸಜ್ಜಿತ ವಸತಿ ವ್ಯವಸ್ಥೆ, ಉತ್ತಮ ಕಲಿಕಾ ವಾತಾವರಣ ಹಾಗೂ ಅಗತ್ಯ ಶೈಕ್ಷಣಿಕ ಮೂಲಸೌಕರ್ಯಗಳನ್ನು ಒದಗಿಸಲಿದೆ. ಆ ಮೂಲಕ ಔರಾದ್ (ಬಿ) ಕ್ಷೇತ್ರದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಮಹತ್ವದ ಕೊಡುಗೆ ನೀಡಲಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಧೊಂಡಿಬಾ ನರೋಟೆ, ಶಿವರಾಜ್ ಅಲ್ಮಾಜೆ, ಸಾಗರ್ ಪಾಟೀಲ್ ಕೊಳ್ಳೂರ್, ಯಾದವರಾವ್ ಸಗರ್, ಮಲ್ಲಪ್ಪ ದಾನಾ, ರಮೇಶ್ ಬಿರಾದಾರ್, ನಾಗನಾಥ್ ಮೋರ್ಗೆ, ಸಂದೀಪ್ ಪಾಟೀಲ್, ಅನೀಲ್ ಬಿರಾದಾರ್ ಹಾಗೂ ಜಗದೀಶ್ ಪಾಟೀಲ್ ಸೇರಿದಂತೆ ಸ್ಥಳೀಯ ಮುಖಂಡರು, ಗ್ರಾಮಸ್ಥರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.






