ಗಡಿ ಭಾಗದಲ್ಲಿ ಉದ್ಯೋಗ ಸೃಷ್ಟಿಸಿ ವಲಸೆ ತಡೆಯಿರಿ : ಜಿಲ್ಲಾ ಪಂಚಾಯತ್ ಸಿಇಒ ಡಾ.ಗೀರಿಶ್ ಬದೋಲೆ

ಔರಾದ್ : ತೆಲಂಗಾಣ ಹಾಗೂ ಮಹಾರಾಷ್ಟ್ರ ಗಡಿಯಲ್ಲಿ ಕೂಲಿ ಕಾರ್ಮಿಕರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಡೆಯಲು ವಿಬಿ-ಜಿ ರಾಮ್ ಜಿ ಯೋಜನೆಯಡಿ ಹೆಚ್ಚು ಉದ್ಯೋಗ ಸೃಷ್ಟಿಸಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ದಿಲೀಪ್ ಬದೋಲೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗಡಿ ಭಾಗದ ತಾಂಡಾಗಳಲ್ಲಿ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯ ಕೂಲಿ ಕಾರ್ಮಿಕರಿಗೆ ಕೆಲಸ ದೊರೆಯುವಂತೆ ಕಾಮಗಾರಿಗಳನ್ನು ಕೈಗೊಳ್ಳಬೇಕು. ಗ್ರಾಮದಲ್ಲಿಯೇ ನಿರಂತರ ಉದ್ಯೋಗ ಲಭ್ಯವಾದರೆ ಕಾರ್ಮಿಕರ ವಲಸೆಯನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗುತ್ತದೆ ಎಂದರು.
ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಸಮುದಾಯ ಕಾಮಗಾರಿಗಳನ್ನು ಗುರುತಿಸಿ ಅನುಷ್ಠಾನಗೊಳಿಸುವ ಮೂಲಕ ಹೆಚ್ಚು ಮಾನವ ದಿನಗಳನ್ನು ಸೃಜಿಸಬೇಕು. ಕಾಮಗಾರಿಗಳ ಬೇಡಿಕೆ ಇರುವ ಕಡೆ ತಕ್ಷಣ ಕೆಲಸ ಆರಂಭಿಸಿ ಕೂಲಿ ಕಾರ್ಮಿಕರಿಗೆ ನಿರಂತರ ಉದ್ಯೋಗ ಕಲ್ಪಿಸುವಂತೆ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಹಾಯಕ ನಿರ್ದೇಶಕ ಜಯಪ್ರಕಾಶ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್, ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ ಹಾಗೂ ಎಡಿಪಿಸಿ ದೀಪಕ್ ಕಡಿಮನಿ ಸೇರಿದಂತೆ ತಾಲೂಕಿನ ಎಲ್ಲ ಪಿಡಿಒಗಳು ಉಪಸ್ಥಿತರಿದ್ದರು.






