ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

ಬೀದರ್: ಜಿಲ್ಲೆಯಲ್ಲಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಜೈ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.
ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮಂಗಳವಾರ ಸಲ್ಲಿಸಿದ ಮನವಿಯಲ್ಲಿ, ಜಿಲ್ಲೆಯ ಶೇ.90ರಷ್ಟು ರೈತರು ಮಳೆ ಆಧಾರಿತ ಕೃಷಿಯನ್ನೇ ಅವಲಂಬಿಸಿದ್ದು, ಸಮರ್ಪಕ ನೀರಾವರಿ ಸೌಲಭ್ಯಗಳ ಕೊರತೆಯಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ತಿಳಿಸಲಾಗಿದೆ.
ಕಾರಂಜಾ ಜಲಾಶಯದ ನೀರಿನ ಪ್ರಯೋಜನ ಬಹುತೇಕ ರೈತರಿಗೆ ದೊರೆಯುತ್ತಿಲ್ಲ. ಮಳೆಯ ಅಭಾವದಿಂದ ಕೆರೆ, ಬಾವಿ ಹಾಗೂ ಕೊಳವೆಬಾವಿಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಕೃಷಿ ಚಟುವಟಿಕೆಗಳ ಜೊತೆಗೆ ಜಾನುವಾರು ಸಾಕಾಣಿಕೆಯೂ ಸಂಕಷ್ಟಕ್ಕೆ ಸಿಲುಕಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯ ಸರ್ಕಾರ ತಕ್ಷಣ ಜಿಲ್ಲೆಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ರೈತರ ಕೃಷಿ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಬೇಕು. ಬೆಳೆ ಹಾನಿಗೆ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕು. ಮರುಬಿತ್ತನೆಗೆ ಉಚಿತ ಅಥವಾ ಸಹಾಯಧನದ ಆಧಾರದ ಮೇಲೆ ಬೀಜ ಮತ್ತು ರಸಗೊಬ್ಬರ ವಿತರಿಸಬೇಕು. ಜೊತೆಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಮತ್ತು ನೀರಿನ ವ್ಯವಸ್ಥೆಯನ್ನು ತುರ್ತಾಗಿ ಕಲ್ಪಿಸಬೇಕು ಎಂದು ವೇದಿಕೆ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಜೈ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ರಮೇಶ್ ಮರ್ಜಾಪೂರ್, ಜಿಲ್ಲಾ ಗೌರವಾಧ್ಯಕ್ಷ ಸೈಯದ್ ನವಾಜ್, ಜಿಲ್ಲಾ ಉಪಾಧ್ಯಕ್ಷ ಮೋಹಸಿನ್ ಪಟೇಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತುಕಾರಾಮ್ ಚಿದ್ರಿ, ಕಾರ್ಮಿಕ ನಗರ ಘಟಕದ ಉಪಾಧ್ಯಕ್ಷ ಗೌಸ್ ಖಾನ್ ಹಾಗೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.






