ಅಂಬೇಡ್ಕರ್ ಅವರು ಸಮಾನತೆ, ನ್ಯಾಯದ ಮೌಲ್ಯಗಳನ್ನು ಸಂವಿಧಾನದಲ್ಲಿ ಅಚ್ಚಳಿಯದಂತೆ ಮೂಡಿಸಿದರು : ಸಚಿವ ಈಶ್ವರ್ ಖಂಡ್ರೆ

ಬೀದರ್: ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯದ ಮೌಲ್ಯಗಳನ್ನು ಸಂವಿಧಾನದಲ್ಲಿ ಅಚ್ಚಳಿಯದಂತೆ ಮೂಡಿಸಿ ದೇಶದ ಸರ್ವತೋಮುಖ ಅಭಿವೃದ್ಧಿಗೆ ಬುನಾದಿ ಹಾಕಿದರು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವದಲ್ಲಿ ಅಂಬೇಡ್ಕರ್ ವೃತ್ತದಲ್ಲಿರುವ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರ ದೂರದೃಷ್ಟಿ ಮತ್ತು ಬದ್ಧತೆಯಿಂದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಹಕ್ಕುಗಳು ಮತ್ತು ಗೌರವಯುತ ಜೀವನದ ಭರವಸೆ ನೀಡುತ್ತಿದೆ. ಶೋಷಿತರು ಹಾಗೂ ಹಿಂದುಳಿದವರ ಹಕ್ಕುಗಳಿಗಾಗಿ ಅವರು ನಡೆಸಿದ ಹೋರಾಟ ಸದಾ ಪ್ರೇರಣೆಯಾಗಿದ್ದು, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಮಾತನಾಡಿ, ಅಂಬೇಡ್ಕರ್ ಅವರ ಸಮಾನತೆ, ನ್ಯಾಯ ಮತ್ತು ಸ್ವಾಭಿಮಾನದ ಸಂದೇಶಗಳು ಸಮಾಜಕ್ಕೆ ದಾರಿದೀಪವಾಗಿವೆ ಎಂದರು.
ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿ, ಅಂಬೇಡ್ಕರ್ ಅವರು ಕೇವಲ ವ್ಯಕ್ತಿಯಲ್ಲ, ಒಂದು ಚಿಂತನಾ ಕ್ರಾಂತಿಯಾಗಿದ್ದಾರೆ. ಅವರ ತತ್ವಗಳು ಸಮಾಜದ ಅಭಿವೃದ್ಧಿಗೆ ಮಾರ್ಗದರ್ಶನವಾಗಿದ್ದು, ಶಿಕ್ಷಣವೇ ಶಕ್ತಿ ಎಂಬ ಸಂದೇಶವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಧಮ್ಮ, ಸಂಸ್ಕೃತಿ ಮತ್ತು ಶಿಕ್ಷಣ ಜಾಗೃತಿ ವೇದಿಕೆ ವತಿಯಿಂದ ಆಯೋಜಿಸಿದ್ದ ಅಂಬೇಡ್ಕರ್ ಜೀವನಚರಿತ್ರೆ ಭಾವಚಿತ್ರ ಪ್ರದರ್ಶನ ಮಳಿಗೆಯನ್ನು ಸಚಿವ ಈಶ್ವರ್ ಖಂಡ್ರೆ ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಮಹಾನಗರ ಪಾಲಿಕೆಯ ಮೇಯರ್ ಎಂ.ಡಿ ಗೌಸ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಮಾಜಿ ಸಚಿವ ಬಂಡೆಪ್ಪಾ ಖಾಶಂಪೂರ್, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಯೋಗೇಶ್, ಮುಖಂಡರಾದ ಸೂರ್ಯಕಾಂತ್ ನಾಗಮಾರಪಳ್ಳಿ, ಈಶ್ವರಸಿಂಗ್ ಠಾಕೂರ್, ವಿಜಯಕುಮಾರ್ ಸೋನಾರೆ, ಮಾರುತಿ ಬೌದ್ಧೆ, ಅನೀಲ್ ಬೆಲ್ದಾರ್, ಸಂಜಯ್ ಜಾಗಿರದಾರ್, ವಿನೋದ್ ಅಪ್ಪೆ, ಪೃತ್ವಿರಾಜ್, ಮಹೇಶ್ ಗೋರನಾಳಕರ್, ಪಂಡಿತರಾವ್ ಚೀದ್ರಿ, ಸಿದ್ದರಾಮಯ್ಯ ಸ್ವಾಮಿ, ಬಾಬು ಪಾಸ್ವಾನ್., ಶ್ರೀಪತರಾವ್ ದಿನೆ, ಶಿವಕುಮಾರ್ ನೀಲಿಕಟ್ಟಿ, ವಿನಯಕುಮಾರ್ ಮಾಳಗೆ, ರಾಜಕುಮಾರ್ ವಾಘಮೊರೆ, ಅಭಿ ಕಾಳೆ, ರಾಜಕುಮಾರ್ ಬನ್ನೂರ್ ಹಾಗೂ ಡಾ.ಕಾಶಿನಾಥ ಸೇರಿದಂತೆ ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು, ಇತರರು ಉಪಸ್ಥಿತರಿದ್ದರು.






