ಡಾ. ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯ, ಸಮಾನತೆ ಸ್ಥಾಪನೆಗೆ ಜೀವನವಿಡೀ ಹೋರಾಡಿದರು : ಸಚಿವ ಈಶ್ವರ್ ಖಂಡ್ರೆ

ಬೀದರ್ : ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯ, ಸಮಾನತೆ ಸ್ಥಾಪನೆಗೆ ಜೀವನವಿಡೀ ಹೋರಾಡಿದರು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು.
ಇಂದು ಡಾ. ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ನಗರದ ಅಂಬೇಡ್ಕರ್ ವೃತ್ತದ ಬಳಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರು ಸಮಾಜದ ಪರಿವರ್ತನೆ, ಅನಿಷ್ಠ ಪದ್ಧತಿಗಳ ನಿರ್ಮೂಲನೆ, ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ಹೋರಾಟ ಮಾಡುವುದರ ಮೂಲಕ ಪ್ರಜಾಸತ್ತಾತ್ಮಕ ಭಾರತದ ನಿರ್ಮಾಣ ಮಾಡಿದ್ದಾರೆ. ಅವರು ಇಂದು ಭೌತಿಕವಾಗಿ ನಮ್ಮ ಮಧ್ಯ ಇಲ್ಲದಿದ್ದರೂ, ಅವರ ಆದರ್ಶ ಮತ್ತು ಚಿಂತನೆಗಳು ಯಾವಾಗಲೂ ನಮ್ಮಲ್ಲಿ ಇರುತ್ತವೆ. ಜಗತ್ತಿನಲ್ಲೇ ಅತ್ಯಂತ ದೊಡ್ಡ ಲಿಖಿತ ಸಂವಿಧಾನವನ್ನು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ನಮಗೆ ಕೊಟ್ಟಿದ್ದಾರೆ ಎಂದರು.
ಭಾರತ ದೇಶಕ್ಕೆ ಸ್ವಾತಂತ್ರ‍್ಯ ಸಿಕ್ಕಿ, ಸಂವಿಧಾನ ಅಳವಡಿಸಿಕೊಂಡು 75 ವರ್ಷಗಳು ಆಗಿವೆ. ಈ 75 ವರ್ಷಗಳಲ್ಲಿ ನಮ್ಮ ದೇಶದಲ್ಲಿ ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ, ವೈಜ್ಞಾನಿಕವಾಗಿ ನಾವು ಪ್ರಗತಿ ಕಂಡಿದ್ದೇವೆ. ನಮ್ಮ ಸಂವಿಧಾನದಿಂದ ಪ್ರತಿಯೊಬ್ಬ ಪ್ರಜೆ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸ್ವಾತಂತ್ರ‍್ಯ, ಮೂಲಭೂತ ಹಕ್ಕು, ವ್ಯಕ್ತಿ ಗೌರವ, ನ್ಯಾಯ ದೊರೆಯುವಂತಾಗಿದೆ ಎಂದು ಹೇಳಿದರು.
ನಾವೆಲ್ಲರೂ ಸಂವಿಧಾನದ ಆಶಯಗಳು, ಮೌಲ್ಯಗಳು ಹಾಗೂ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಾನವೀಯ ಸಂದೇಶಗಳು ಮತ್ತು ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಮಾಜಿ ಸಚಿವ ಬಂಡೇಪ್ಪ ಖಾಶೆಂಪುರ್, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಗಿರೀಶ್ ಬದೋಲೆ, ಬೀದರ್ ಸಹಾಯಕ ಆಯುಕ್ತ ಮೊಹಮದ್ ಶಕೀಲ್, ಸೂರ್ಯಕಾಂತ್ ನಾಗಮಾರಪಳ್ಳಿ, ಅನೀಲಕುಮಾರ್ ಬೆಲ್ದಾರ್ , ಬಾಬುರಾವ್ ಪಾಸ್ವಾನ್, ಈಶ್ವರಸಿಂಗ್ ಠಾಕೂರ್, ಪಂಡಿತ್ ಚಿದ್ರಿ, ಹಣಮಂತ್ ಮಲ್ಕಾಪುರ್ ಹಾಗೂ ವಿಸ್ಡಮ್ ಸಂಸ್ಥೆ ಅಧ್ಯಕ್ಷ ಎಂ.ಡಿ. ಆಸೀಫುದ್ದೀನ್ ಸೇರಿದಂತೆ ಇತರೆ ಮುಖಂಡರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.







