ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ: ಸಚಿವ ಈಶ್ವರ್ ಖಂಡ್ರೆ

ಭಾಲ್ಕಿ: ಮತದಾರರ ಪಟ್ಟಿಯ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ನಗರದ ಬಿಕೆಐಟಿ ಸಭಾಂಗಣದಲ್ಲಿ ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ಸಂಜೆ ಆಯೋಜಿಸಿದ್ದ ಎಸ್‌ಐಆರ್ ಕುರಿತ ಜನಜಾಗೃತಿ ಹಾಗೂ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಿಎಲ್‌ಎ-2 ಪ್ರತಿನಿಧಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ, ಎಸ್‌ಐಆರ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ನೆರವಾಗಬೇಕು ಎಂದು ಅವರು ಕರೆ ನೀಡಿದರು.
ಪ್ರಜಾಪ್ರಭುತ್ವದ ಭದ್ರ ಅಡಿಪಾಯವೇ ಮತದಾರರಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕು ಸುರಕ್ಷಿತವಾಗಿರಲು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಂಘಟಿತವಾಗಿ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವುದು ಅಗತ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಸಾಗರ್ ಖಂಡ್ರೆ, ಮತದಾರರ ಹಕ್ಕುಗಳ ರಕ್ಷಣೆಗೆ ಕಾರ್ಯಕರ್ತರು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ ಪಕ್ಷದ ಅಧ್ಯಕ್ಷ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಹಣಮಂತರಾವ್ ಚವ್ಹಾಣ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಮಾಶೆಟ್ಟೆ, ಮಲ್ಲಿಕಾರ್ಜುನ್ ಪಾಟೀಲ್ ಮುಗನೂರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕರಾವ್ ಸೋನಜೀ, ಜಿಪಂ ಮಾಜಿ ಅಧ್ಯಕ್ಷ ಶಿವರಾಜ್ ಹಾಸನಕರ್, ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ್ ವಂಕೆ ಹಾಗೂ ಅಬ್ದುಲ್ ನಸೀರ್ ಸೇರಿದಂತೆ ಹಲವರು ಇದ್ದರು.






