ರೈತರಿಗೆ ಯೋಜನೆಗಳ ಸೌಲಭ್ಯ ಸಮರ್ಪಕವಾಗಿ ತಲುಪಿಸಿ: ಅಧಿಕಾರಿಗಳಿಗೆ ಶಾಸಕ ಶೈಲೇಂದ್ರ ಬೆಲ್ದಾಳೆ ಸೂಚನೆ
ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

ಬೀದರ್: ಮಳೆ ಕೊರತೆ, ಬೆಳೆ ಪರಿಸ್ಥಿತಿ, ಬೆಳೆ ವಿಮೆ ಹಾಗೂ ರೈತರ ಸಮಸ್ಯೆಗಳ ಕುರಿತು ಕೃಷಿ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ರೈತರಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬೀದರ್ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕ್ಷೇತ್ರದಲ್ಲಿ ನಡೆಯುತ್ತಿರುವ ರಸ್ತೆ, ಸೇತುವೆ, ಚರಂಡಿ, ಕುಡಿಯುವ ನೀರು, ನೀರಾವರಿ, ಶಾಲಾ ಕಟ್ಟಡ, ಅಂಗನವಾಡಿ, ಆಸ್ಪತ್ರೆ, ಆರೋಗ್ಯ ಕೇಂದ್ರ, ಸಮುದಾಯ ಭವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಅವರು, ಯಾವುದೇ ಕಾಮಗಾರಿ ವಿಳಂಬವಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ಶಿಕ್ಷಣ, ಆರೋಗ್ಯ, ಲೋಕೋಪಯೋಗಿ ಸೇರಿದಂತೆ ಎಲ್ಲ ಇಲಾಖೆಗಳು ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟವನ್ನು ಖಚಿತಪಡಿಸಿಕೊಂಡು ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ಮುಖ್ಯ ಗುರಿಯಾಗಿದ್ದು, ಅಧಿಕಾರಿಗಳು ಕಚೇರಿಗೆ ಸೀಮಿತವಾಗದೆ ಗ್ರಾಮಗಳಿಗೆ ಭೇಟಿ ನೀಡಿ ಕಾಮಗಾರಿಗಳ ವಾಸ್ತವ ಸ್ಥಿತಿ ಪರಿಶೀಲಿಸಿ, ಸ್ಥಳದಲ್ಲಿಯೇ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ತಹಶೀಲ್ದಾರ್ ರವಿಕುಮಾರ್ ದಾಮಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.






