ಹುಲಸೂರು | ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದ ಆರೋಪ: ನಾಲ್ವರ ವಿರುದ್ಧ ಪ್ರಕರಣ ದಾಖಲು

ಹುಲಸೂರು: 17 ವರ್ಷದ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದ ಆರೋಪದ ಮೇರೆಗೆ ನಾಲ್ವರ ವಿರುದ್ಧ ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ಸೋಮವಾರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.
ಬಾಲಕಿಯ ತಂದೆ ನೀಡಿದ ದೂರಿನ ಪ್ರಕಾರ, ಹೊಲಕ್ಕೆ ಊಟ ತೆಗೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಯುವಕನೊಬ್ಬ ಕಾರಿನಲ್ಲಿ ಕರೆದೊಯ್ದಿದ್ದಾನೆ. ಈ ಕೃತ್ಯಕ್ಕೆ ಇನ್ನು ಮೂವರು ಸಹಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಇನ್ನೊಂದೆಡೆ, ಬಾಲಕಿಯ ಸಂಬಂಧಿಕರಿಗೆ ಕಳುಹಿಸಿರುವ ವಿಡಿಯೊದಲ್ಲಿ ತಾನು ಸ್ವಇಚ್ಛೆಯಿಂದ ಯುವಕನೊಂದಿಗೆ ತೆರಳಿದ್ದು, ಮದುವೆಯಾಗುವ ನಿರ್ಧಾರ ಕೈಗೊಂಡಿರುವುದಾಗಿ ಬಾಲಕಿ ತಿಳಿಸಿದ್ದಾಳೆ ಎನ್ನಲಾಗಿದೆ. ಅಲ್ಲದೆ, ತನ್ನನ್ನು ಅಪಹರಿಸಲಾಗಿದೆ ಎಂಬ ಆರೋಪವನ್ನೂ ವಿಡಿಯೊದಲ್ಲಿ ನಿರಾಕರಿಸಿರುವುದಾಗಿ ತಿಳಿದುಬಂದಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಕಡೆಯವರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬಾಲಕಿಯ ಮನೆಯವರು ಪ್ರತ್ಯಾರೋಪ ಮಾಡಿ ದೂರು ನೀಡಿದ್ದಾರೆ. ಎರಡೂ ಕಡೆಯವರ ದೂರುಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಈ ಕುರಿತು ಹುಲಸೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಕಲಂ 137(2) ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.




