ಹುಲಸೂರ್ | ವೃದ್ಧೆಯ ಕೊಲೆಗೈದು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

ಹುಲಸೂರ್: ತಾಲ್ಲೂಕಿನ ಮುಚಳಂಬ ಗ್ರಾಮದಲ್ಲಿ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯನ್ನು ಕೊಲೆಗೈದು, ಸುಮಾರು 6 ರಿಂದ 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಮೃತರನ್ನು ಗ್ರಾಮದ ಕೊನೆಯ ಮನೆಯಲ್ಲಿ ವಾಸಿಸುತ್ತಿದ್ದ ಲಲಿತಾಬಾಯಿ ಮಾಶೆಟ್ಟಿ (75) ಎಂದು ಗುರುತಿಸಲಾಗಿದೆ.
ಲಲಿತಾಬಾಯಿ ಅವರ ಮಕ್ಕಳು ವಿವಿಧೆಡೆ ಕೆಲಸಕ್ಕೆ ತೆರಳಿದ್ದರಿಂದ ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು ಎನ್ನಲಾಗಿದೆ.
ರವಿವಾರ ಮಧ್ಯರಾತ್ರಿಯಿಂದ ಸೋಮವಾರ ನಸುಕಿನ ಜಾವದ ನಡುವೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಲಲಿತಾಬಾಯಿ ಅವರನ್ನು ಕೊಲೆಗೈದು, ಮನೆಯಲ್ಲಿದ್ದ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹೆಚ್ಚುವರಿ ಎಸ್‌ಪಿ ಚಂದ್ರಕಾಂತ್ ಪೂಜಾರಿ, ಡಿವೈಎಸ್‌ಪಿ ಮಡಿವಾಳಪ್ಪ ಪಿ.ಎಸ್., ಸಿಪಿಐ ಅಮೋಲ್ ಕಾಳೆ ಹಾಗೂ ಪಿಎಸ್‌ಐ ನಾಗೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡವೂ ಸ್ಥಳಕ್ಕೆ ತೆರಳಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




