ಹುಲಸೂರು | ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹರಿಗೆ ತಲುಪಿಸಲು ಅಧಿಕಾರಿಗಳು ಗಮನಹರಿಸಿ: ಸಿದ್ರಾಮ ಕಾಮಣ್ಣಾ
ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಹುಲಸೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಯಾವುದೇ ತಾಂತ್ರಿಕ ಅಥವಾ ಆಡಳಿತಾತ್ಮಕ ಅಡಚಣೆಗಳಿಲ್ಲದೆ ತಲುಪುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಗಮನಹರಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ರಾಮ ಕಾಮಣ್ಣಾ ಸೂಚಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರಾಗಿರುವ ಯಾರೂ ವಂಚಿತರಾಗಬಾರದು. ಫಲಾನುಭವಿಗಳಿಗೆ ಎದುರಾಗಿರುವ ಸಮಸ್ಯೆಗಳನ್ನು ಗುರುತಿಸಿ ತ್ವರಿತವಾಗಿ ಪರಿಹರಿಸಬೇಕು. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಾಗುವುದು ಎಂದು ತಿಳಿಸಿದರು.
ಗೃಹಲಕ್ಷ್ಮೀ : ತಾಲ್ಲೂಕಿನಲ್ಲಿ 10,289 ಫಲಾನುಭವಿಗಳಿದ್ದು, ಸೆಪ್ಟೆಂಬರ್ ತಿಂಗಳಲ್ಲಿ 9,444 ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದೆ. ಒಟ್ಟು 1.88 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ವಿವಿಧ ತಾಂತ್ರಿಕ ಹಾಗೂ ಇತರೆ ಕಾರಣಗಳಿಂದ ಮೇ ತಿಂಗಳ 845 ಫಲಾನುಭವಿಗಳಿಗೆ ಇನ್ನೂ ಹಣ ಜಮೆಯಾಗಿಲ್ಲ. ಸೆಪ್ಟೆಂಬರ್ ತಿಂಗಳಲ್ಲಿ ಮೃತಪಟ್ಟ ಕೆಲ ಫಲಾನುಭವಿಗಳ ಖಾತೆಗೆ ಜಮೆಯಾಗಿರುವ ಹಣವನ್ನು ಮರಳಿ ಪಡೆಯಲು ಸಂಬಂಧಪಟ್ಟ ಬ್ಯಾಂಕ್‌ಗಳಿಗೆ ಪತ್ರ ಹಾಗೂ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಅನ್ನಭಾಗ್ಯ: ತಾಲ್ಲೂಕಿನಲ್ಲಿ ಒಟ್ಟು 10,175 ಪಡಿತರ ಚೀಟಿಗಳಿದ್ದು, ಇತ್ತೀಚೆಗೆ 100ಕ್ಕೂ ಹೆಚ್ಚು ಪಡಿತರ ಚೀಟಿಗಳು ಹೆಚ್ಚಳವಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಶಕ್ತಿ: ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಸದಸ್ಯರು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು, ಆದಾಯ ಮತ್ತು ವೆಚ್ಚದ ನಡುವಿನ ವ್ಯತ್ಯಾಸದಿಂದ ಸದ್ಯಕ್ಕೆ ಹೊಸ ಬಸ್ ಸಂಚಾರ ಆರಂಭಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಯುವನಿಧಿ: ತಾಲ್ಲೂಕಿನಲ್ಲಿ 375 ಅಭ್ಯರ್ಥಿಗಳ ಪೈಕಿ 182 ಪದವೀಧರರು ಹಾಗೂ ಇಬ್ಬರು ಡಿಪ್ಲೊಮಾ ಅಭ್ಯರ್ಥಿಗಳು ಸೇರಿದಂತೆ ಒಟ್ಟು 184 ಮಂದಿ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.
ಗೃಹಜ್ಯೋತಿ: ತಾಲ್ಲೂಕಿನ ಜೆಸ್ಕಾಂ ವ್ಯಾಪ್ತಿಯಲ್ಲಿ ಕೇವಲ ಇಬ್ಬರು ಲೈನ್‌ಮನ್‌ಗಳು ಕಾರ್ಯನಿರ್ವಹಿಸುತ್ತಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ವಿಳಂಬವಾಗುತ್ತಿದೆ ಎಂದು ಸದಸ್ಯರು ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಜೆಇ ಚಂದ್ರಕಾಂತ ಚಿರಡೇ, ಸರ್ಕಾರದಿಂದ ಹೊಸ ನೇಮಕಾತಿ ನಡೆಯದ ಕಾರಣ ಸಿಬ್ಬಂದಿ ಕೊರತೆ ಉಂಟಾಗಿದೆ ಎಂದರು.
ಟ್ರಾನ್ಸ್‌ಫಾರ್ಮರ್‌ಗಳು ಸುಡುವುದು ಹಾಗೂ ಫ್ಯೂಸ್ ಬದಲಾವಣೆಯಲ್ಲಿ ವಿಳಂಬವಾಗುತ್ತಿರುವುದರಿಂದ ರೈತರ ನೀರಾವರಿಗೆ ತೊಂದರೆಯಾಗುತ್ತಿದೆ ಎಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಅಪಾಯಕಾರಿ ವಿದ್ಯುತ್ ಸ್ಥಾವರಗಳ ದುರಸ್ತಿ ಹಾಗೂ ವಿದ್ಯುತ್ ಅವಘಡದಿಂದ ಕಬ್ಬಿನ ಬೆಳೆ ಹಾನಿಯಾಗಿರುವ ವಿಚಾರವೂ ಸಭೆಯಲ್ಲಿ ಪ್ರಸ್ತಾಪವಾಯಿತು. ಸಮಸ್ಯೆಗಳನ್ನು ಶೀಘ್ರ ಪರಿಹರಿಸುವುದಾಗಿ ಜೆಸ್ಕಾಂ ಅಧಿಕಾರಿಗಳು ಭರವಸೆ ನೀಡಿದರು.
ಅಧಿಕಾರಿಗಳ ಗೈರಿಗೆ ಆಕ್ಷೇಪ: ಹಲವು ಇಲಾಖೆಗಳ ಮುಖ್ಯ ಅಧಿಕಾರಿಗಳು ಸಭೆಗೆ ಗೈರಾಗಿ, ತಮ್ಮ ಬದಲಿಗೆ ಸಿಬ್ಬಂದಿಯನ್ನು ಕಳುಹಿಸಿದ್ದರಿಂದ ಯೋಜನೆಗಳ ಕುರಿತು ಸಮರ್ಪಕ ಮಾಹಿತಿ ಲಭ್ಯವಾಗಿಲ್ಲ ಎಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಮುಂದಿನ ಸಭೆಗಳಿಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ಒತ್ತಾಯಿಸಿದರು.
ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳ ಅನುಷ್ಠಾನ, ಫಲಾನುಭವಿಗಳ ಸಂಖ್ಯೆ, ಸೌಲಭ್ಯ ವಿತರಣೆಯ ಸ್ಥಿತಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ್ ಜಮ್ಮು, ಮಹೇಶ್ ಪಾಟೀಲ್, ಸತೀಶ್ ಗಾಯಕವಾಡ್, ಭಾಗವತ್ ಪುಂಡೆ, ವೆಂಕಟೇಶ್ ಗುತ್ತಿಗೆದಾರ, ಪ್ರಶಾಂತ ಪಾಟೀಲ, ತ್ರಿಬಂಕ ಜವಾಯಿ, ವಿನಾಯಕ ಪವಾರ, ಗೌಸೋದೀನ ಬಿರಿವಾಲೆ, ಈಶ್ವರ ಮೇತ್ರೆ, ಶಿವಕುಮಾರ ಕೋಳಿ, ಪ್ರೀತಮ್ ಜಾಧವ್, ಬಾಲಾಜಿ ಸೂರ್ಯವಂಶಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.






