ಹುಮನಾಬಾದ್ | ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ರಾಜಶೇಖರ್ ಪಾಟೀಲ್
ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ್ ಪರ ಪ್ರಚಾರ

ಹುಮನಾಬಾದ್: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ರಾಜರಾಜೇಶ್ವರಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಶುಕ್ರವಾರ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಅವರು ಶಿಕ್ಷಕರೊಂದಿಗೆ ಸಂವಾದ ನಡೆಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಮಟ್ಟೂರ್ ಪರ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶಿಕ್ಷಕರ ವಿವಿಧ ಸಮಸ್ಯೆಗಳು ಹಾಗೂ ಬೇಡಿಕೆಗಳ ಕುರಿತು ಚರ್ಚಿಸಿದರು. ಶಿಕ್ಷಕರ ಹಳೆಯ ಪಿಂಚಣಿ ಯೋಜನೆ, ವೇತನ ಪರಿಷ್ಕರಣೆ, ವಿವಿಧ ಭತ್ಯೆಗಳು ಸೇರಿದಂತೆ ಶಿಕ್ಷಕರಿಗೆ ಸಂಬಂಧಿಸಿದ ನ್ಯಾಯಸಮ್ಮತ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆದು, ಅವುಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಅವರ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಶರಣಪ್ಪ ಮಟ್ಟೂರ್ ಅವರು ಕಾರ್ಯನಿರ್ವಹಿಸಲಿದ್ದಾರೆ. ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಮಟ್ಟೂರ್ ಅವರಿಗೆ ಬೆಂಬಲ ನೀಡುವಂತೆ ಶಿಕ್ಷಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಫ್ಸರಮಿಯಾ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಓಂಕಾರ್ ತುಂಬಾ, ಪ್ರಮುಖರಾದ ಕಂಟೆಪ್ಪ ದಾನ, ಮಲ್ಲಿಕಾರ್ಜುನ್ ಮಾಳಶಟ್ಟಿ ಹಾಗೂ ಸುರೇಂದ್ರನಾಥ್ ಹುಡಗಿಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.






