ಹುಮನಾಬಾದ್ | ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆ ಹರಾಜು ಪ್ರಕ್ರಿಯೆ ತಡೆ: ರಾಜಶೇಖರ್ ಪಾಟೀಲ್

ಹುಮನಾಬಾದ್: ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ್ ಅವರ ಪ್ರಯತ್ನದ ಫಲವಾಗಿ ಬೀದರ್ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯ ಹರಾಜು ಪ್ರಕ್ರಿಯೆಯನ್ನು ತಡೆಹಿಡಿಯಲಾಗಿದೆ ಎಂದು ಮಾಜಿ ಸಚಿವ ರಾಜಶೇಖರ್ ಪಾಟೀಲ್ ತಿಳಿಸಿದ್ದಾರೆ.
ಆ.17ರಂದು ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಡಾ. ಚಂದ್ರಶೇಖರ ಪಾಟೀಲ್ ಅವರು ಮಾತನಾಡಿ, ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯ ಹರಾಜು ಪ್ರಕ್ರಿಯೆಯನ್ನು ತಡೆದು, ಎಲ್‌ಆರ್‌ಒಟಿ ಆಧಾರದ ಮೇಲೆ ಕಾರ್ಖಾನೆಯನ್ನು ಗುತ್ತಿಗೆಗೆ ನೀಡಬೇಕು ಎಂದು ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿದ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರು ತಕ್ಷಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಇದೀಗ ಸಚಿವರು ನುಡಿದಂತೆ ನಡೆದುಕೊಂಡು ಹರಾಜು ಪ್ರಕ್ರಿಯೆ ತಡೆಹಿಡಿಯುವ ಆದೇಶ ಹೊರಡಿಸಿರುವುದು ಸಂತಸದ ಸಂಗತಿ ಎಂದರು.
ನಾನು ಹಾಗೂ ಭೀಮರಾವ್ ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರಿಗೂ ಬಿಎಸ್‌ಎಸ್‌ಕೆ ಕಾರ್ಖಾನೆಯ ಕುರಿತು ಸಂಪೂರ್ಣ ಮಾಹಿತಿ ನೀಡಿ ಮನವರಿಕೆ ಮಾಡಿಕೊಡಲಾಗಿತ್ತು. ಕಾರ್ಖಾನೆಯನ್ನು ಗುತ್ತಿಗೆಗೆ ನೀಡಿ ಪುನರಾರಂಭಿಸುವವರೆಗೆ ನಮ್ಮ ನಿರಂತರ ಪ್ರಯತ್ನ ಮುಂದುವರಿಯಲಿದೆ ಎಂದು ಹೇಳಿದರು.
ರೈತರ ಪರವಾಗಿರುವ ನಮ್ಮ ನಿಲುವನ್ನು ಸರ್ಕಾರಕ್ಕೆ ಸ್ಪಷ್ಟವಾಗಿ ತಿಳಿಸಿದ ಬಳಿಕ ಈ ಸಕಾರಾತ್ಮಕ ಆದೇಶ ಹೊರಬಂದಿರುವುದು ಸಂತಸ ತಂದಿದೆ. ನಮ್ಮ ಸರ್ಕಾರ ರೈತರ ಪರವಾಗಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ರಾಜಶೇಖರ್ ಪಾಟೀಲ್ ತಿಳಿಸಿದ್ದಾರೆ.
ಈ ಮಹತ್ವದ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಎಲ್ಲ ಸಚಿವರಿಗೆ ಬೀದರ್ ಜಿಲ್ಲೆಯ ಸಮಸ್ತ ರೈತರ ಪರವಾಗಿ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






