ಹುಮನಾಬಾದ್ | ಬಿಎಸ್‌ಎಸ್‌ಕೆ ಹರಾಜು ಪ್ರಕ್ರಿಯೆ ತಡೆಗೆ ಸರಕಾರದ ನಿರ್ದೇಶನ : ಶಾಸಕ ಸಿದ್ದು ಪಾಟೀಲ್

ಹುಮನಾಬಾದ್: ಜಿಲ್ಲೆಯ ಕಬ್ಬು ಬೆಳೆಗಾರ ರೈತರು ಹಾಗೂ ಕಾರ್ಖಾನೆಯ ಕಾರ್ಮಿಕರ ಹಿತದೃಷ್ಟಿಯಿಂದ ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯ ಹರಾಜು ಪ್ರಕ್ರಿಯೆಯನ್ನು ತಡೆಹಿಡಿದು, ಕಾರ್ಖಾನೆಯನ್ನು ಎಲ್‌ಆರ್‌ಟಿಒ ಆಧಾರದ ಮೇಲೆ ಪುನಶ್ಚೇತನಗೊಳಿಸಬೇಕು ಎಂದು ಜು.24ರಂದು ಮುಖ್ಯಮಂತ್ರಿಗಳಿಗೆ ಹಾಗೂ ಆ.19ರಂದು ಸಕ್ಕರೆ ಸಚಿವರನ್ನು ಖುದ್ದು ಭೇಟಿಯಾಗಿ ಮನವಿ ಸಲ್ಲಿಸಿದ್ದೆ. ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಹಾಗೂ ಸಕ್ಕರೆ ಸಚಿವರು ಡಿಸಿಸಿ ಬ್ಯಾಂಕ್ ಹೊರಡಿಸಿದ್ದ ಹರಾಜು ಪ್ರಕ್ರಿಯೆಯನ್ನು ತಕ್ಷಣ ತಡೆಹಿಡಿಯುವಂತೆ ನಿರ್ದೇಶನ ನೀಡಿದ್ದಾರೆ ಎಂದು ಶಾಸಕ ಡಾ. ಸಿದ್ದು ಪಾಟೀಲ್ ತಿಳಿಸಿದ್ದಾರೆ.
ಜಿಲ್ಲೆಯ ರೈತರ ಜೀವನಾಡಿಯಾಗಿರುವ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಹರಾಜು ಮಾಡಲು ಬೀದರ್ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆಡಳಿತವು ಸೆ.2ರಂದು ಪತ್ರಿಕಾ ಪ್ರಕಟಣೆ ಮೂಲಕ ಆದೇಶ ಹೊರಡಿಸಿತ್ತು. ಇದೀಗ ಮರುಹರಾಜು ಪ್ರಕ್ರಿಯೆಯನ್ನು ತಕ್ಷಣದಿಂದಲೇ ತಡೆಹಿಡಿಯುವಂತೆ ರಾಜ್ಯ ಸರ್ಕಾರವು ಬೀದರ್ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗೆ ನಿರ್ದೇಶನ ನೀಡಿದೆ ಎಂದು ಅವರು ತಿಳಿಸಿದ್ದಾರೆ.
ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ ಕಬ್ಬು ಬೆಳೆಗಾರರು ಹಾಗೂ ಕಾರ್ಮಿಕರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ಸ್ವಾಗತಾರ್ಹ. ಇದಕ್ಕಾಗಿ ಮುಖ್ಯಮಂತ್ರಿ ಹಾಗೂ ಸಕ್ಕರೆ ಸಚಿವರಿಗೆ ಜಿಲ್ಲೆಯ ಅನ್ನದಾತರು ಮತ್ತು ರೈತರ ಪರವಾಗಿ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶಾಸಕ ಡಾ. ಸಿದ್ದು ಪಾಟೀಲ್ ಹೇಳಿದ್ದಾರೆ.






