ಹುಮನಾಬಾದ್ | ಗ್ರಾಮ ಪಂಚಾಯತ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನ: ವ್ಯಕ್ತಿಗೆ ಗಂಭೀರ ಗಾಯ

ಹುಮನಾಬಾದ್: ತಾಲೂಕಿನ ನಂದಗಾವ್ ಗ್ರಾಮ ಪಂಚಾಯತ್ ಕಟ್ಟಡದ ಮೇಲಿಂದ ವ್ಯಕ್ತಿಯೊಬ್ಬರು ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರವಿವಾರ ಬೆಳಗ್ಗೆ ನಡೆದಿದೆ.
ಆನಂದ್ ಮೊಳಕೆರೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾರೆ. ಅವರು ಗ್ರಾಮ ಪಂಚಾಯತ್ ಕಟ್ಟಡದ ಮೇಲೇರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣ ಸ್ಥಳಕ್ಕೆ ಧಾವಿಸಿ ಅವರನ್ನು ಕೆಳಗಿಳಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಆನಂದ್ ಕಟ್ಟಡದ ಮೇಲಿನಿಂದ ಜಿಗಿದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಹುಮನಾಬಾದ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಗ್ರಾಮದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಘಟನೆ ಹುಮನಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.




