ಮಾ.16 ರಂದು ಜಗದ್ಗುರು ರೇಣುಕಾಚಾರ್ಯರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಗುವುದು : ಶಿವಕುಮಾರ್ ಶೀಲವಂತ್

ಬೀದರ್ : ಮಾ.16 ರಂದು ನಡೆಯುವ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿಯನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಅಪರ್ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ್ ತಿಳಿಸಿದರು.
ಇಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಾ.16 ರಂದು ನಡೆಯುವ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ ಕುರಿತು ಕರೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿಯನ್ನು ಜಿಲ್ಲಾಡಳಿತದಿಂದ ಬೇಕಾದ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲಾಗುವುದು. ಅಂದು ಎಲ್ಲಾ ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಮಹಾತ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಹಾಗೆಯೇ ಎಲ್ಲಾ ಸರ್ಕಾರಿ ಕಚೇರಿಗಳ ಮೇಲೆ ಹಾಗೂ ಎಲ್ಲಾ ಮಹಾತ್ಮರ ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗುವುದು ಎಂದು ಹೇಳಿದರು.
ಅಂದು ಬೆಳಿಗ್ಗೆ 9:30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ರಥ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯಿಂದ ಶಿವಾಜಿ ಸರ್ಕಲ್, ಬಸವೇಶ್ವರ್ ಸರ್ಕಲ್, ಅಂಬೇಡ್ಕರ್ ಸರ್ಕಲ್, ಕರಿಯಪ್ಪ ಸರ್ಕಲ್ ಮೂಲಕ ಬೆಳಿಗ್ಗೆ 11:30 ಕ್ಕೆ ಪೂಜ್ಯ ಶ್ರೀ ಚನ್ನಬಸವ ಪಟ್ಟದೇವರು ರಂಗಮಂದಿರ ತಲುಪುವುದು ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ವೈಜಿನಾಥ್ ಕಮಠಾಣೆ ಮುಖಂಡರಾದ ಶಿವಯ್ಯ ಸ್ವಾಮಿ, ಶಿವಶರಣಪ್ಪ ವಾಲಿ, ಬಿ.ಜಿ. ಸೆಟ್ಕಾರ್, ಕುಶಾಲ್ ಪಾಟೀಲ್ ಖಾನಾಪುರ್, ರಾಮಕೃಷ್ಣ ಸಾಳೆ ಹಾಗೂ ಸಿದ್ದರಾಮಯ್ಯ ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.







