ಬೀದರ್ನಲ್ಲಿ ಹಿಂದಿ ಸಾಹಿತ್ಯ ಸಮ್ಮೇಳನ ಆಯೋಜನೆಗೆ ನಮ್ಮ ಕರ್ನಾಟಕ ಸೇನೆ ವಿರೋಧ

ಗಣೇಶ್ ಪಾಟೀಲ್
ಭಾಲ್ಕಿ: ಪ್ರಯಾಗರಾಜ್ ವಿಶ್ವ ಹಿಂದಿ ಸಾಹಿತ್ಯ ಸೇವಾ ಸಂಸ್ಥೆ ಹಾಗೂ ಗುರುನಾನಕ ಪದವಿ ಕಾಲೇಜಿನ ವತಿಯಿಂದ ನಗರದ ಗುರುನಾನಕ ಪದವಿ ಕಾಲೇಜಿನಲ್ಲಿ ಎರಡು ದಿನಗಳ ರಾಷ್ಟ್ರೀಯ ಹಿಂದಿ ಸಾಹಿತ್ಯ ಸಮ್ಮೇಳನ ಆಯೋಜಿಸಿರುವುದಕ್ಕೆ ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಗೌರವಾಧ್ಯಕ್ಷ ರಮೇಶ್ ಚಿದ್ರಿ ಹಾಗೂ ಅಧ್ಯಕ್ಷ ಗಣೇಶ್ ಪಾಟೀಲ್ ಜ್ಯಾಂತಿ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಜಂಟಿ ಪ್ರಕಟಣೆ ನೀಡಿರುವ ಅವರು, ಉತ್ತರ ಪ್ರದೇಶದಲ್ಲಿ ಮೊದಲ ರಾಷ್ಟ್ರೀಯ ಹಿಂದಿ ಸಾಹಿತ್ಯ ಸಮ್ಮೇಳನ ನಡೆಸಲಾಗಿದ್ದು, ಎರಡನೇ ಸಮ್ಮೇಳನವನ್ನು ಬೀದರ್ ನಗರದಲ್ಲಿ ಆಯೋಜಿಸಲಾಗಿದೆ. ಇದು ಗಡಿ ಭಾಗದಲ್ಲಿ ಹಿಂದಿ ಭಾಷೆಯ ಪ್ರಚಾರ ಹಾಗೂ ಹೇರಿಕೆಗೆ ನಡೆಸುತ್ತಿರುವ ಪ್ರಯತ್ನವಾಗಿದೆ ಎಂದು ಟೀಕಿಸಿದ್ದಾರೆ.
ಹಿಂದಿ ನಮ್ಮ ನಾಡ ಭಾಷೆಯಲ್ಲ. ಅದಕ್ಕೆ ರಾಷ್ಟ್ರೀಯ ಭಾಷೆಯ ಮಾನ್ಯತೆಯೂ ಇಲ್ಲ. ಹೀಗಿರುವಾಗ ಜಿಲ್ಲೆಯಲ್ಲಿ ಹಿಂದಿಗೆ ಉತ್ತೇಜನ ನೀಡುವ ಕಾರ್ಯಕ್ರಮ ಆಯೋಜಿಸಿರುವುದು ಸರಿಯಲ್ಲ ಎಂದು ಅವರು ದೂರಿದ್ದಾರೆ.
ಕರ್ನಾಟಕದ ಗಡಿಯಲ್ಲಿರುವ ಬೀದರ್ ಜಿಲ್ಲೆಯಲ್ಲಿ ಈಗಾಗಲೇ ಕನ್ನಡದ ಸ್ಥಿತಿ ಶೋಚನೀಯವಾಗಿದೆ. ಇಂತಹ ಸಂದರ್ಭದಲ್ಲಿ ಹಿಂದಿ ಸಾಹಿತ್ಯ ಸಮ್ಮೇಳನ ಆಯೋಜಿಸುವುದರಿಂದ ಕನ್ನಡ ಭಾಷೆಯ ಬೆಳವಣಿಗೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಲಿದೆ. ಆದ್ದರಿಂದ ಜಿಲ್ಲಾಡಳಿತ ತಕ್ಷಣ ಸಮ್ಮೇಳನವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದೆ. ಇಲ್ಲಿ ಕನ್ನಡ ಸಂಘ-ಸಂಸ್ಥೆಗಳು ಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯಕ್ಕೆ ಆದ್ಯತೆ ನೀಡಬೇಕು. ಅನ್ಯ ಭಾಷೆಗಳಿಗೆ ಪ್ರೋತ್ಸಾಹ ನೀಡಬಾರದು. ಇಂತಹ ಕಾರ್ಯಕ್ರಮಗಳನ್ನು ಮುಂದುವರಿಸಿದರೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.






