ಬ್ರೀಮ್ಸ್ ಆಸ್ಪತ್ರೆಯಲ್ಲಿ ಪೌಷ್ಟಿಕ ಆಹಾರ ಕೊಠಡಿ ಉದ್ಘಾಟಿಸಿದ ಸಚಿವ ಈಶ್ವರ್ ಖಂಡ್ರೆ

ಬೀದರ್ : ನಗರದ ಬ್ರೀಮ್ಸ್ ಆಸ್ಪತ್ರೆಯಲ್ಲಿ ಮಹಿಳಾ ರೋಗಿಗಳು ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರ ಸರಬರಾಜು ಮಾಡುವ ಉದ್ದೇಶದಿಂದ ನೂತನವಾಗಿ ನಿರ್ಮಿಸಲಾದ ಸುಸಜ್ಜಿತ ಪೌಷ್ಟಿಕ ಆಹಾರ ಕೋಣೆಯನ್ನು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಶನಿವಾರ ಉದ್ಘಾಟಿಸಿದರು.
ಉದ್ಘಾಟನೆಯ ನಂತರ ಅವರು ಆಸ್ಪತ್ರೆಯ ವಾರ್ಡ್ಗಳಿಗೆ ಖುದ್ದಾಗಿ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ರೋಗಿಗಳಿಗೆ ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರ ವಿತರಿಸಿದರು.
ಈ ವೇಳೆ ರೋಗಿಗಳ ಆರೋಗ್ಯ ವಿಚಾರಿಸಿದ ಸಚಿವರು, ಆಸ್ಪತ್ರೆಯಲ್ಲಿ ದೊರೆಯುತ್ತಿರುವ ವೈದ್ಯಕೀಯ ಸೌಲಭ್ಯಗಳು, ನೈರ್ಮಲ್ಯ ಮತ್ತು ಊಟದ ಗುಣಮಟ್ಟದ ಕುರಿತು ಸಾರ್ವಜನಿಕರಿಂದ ನೇರವಾಗಿ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು, ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಶೀಘ್ರ ಚೇತರಿಕೆಗೆ ವೈದ್ಯಕೀಯ ಚಿಕಿತ್ಸೆಯ ಜೊತೆಗೆ ಸತ್ವಯುತ ಹಾಗೂ ಶುಚಿ-ರುಚಿಯಾದ ಆಹಾರ ನೀಡುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ನೂತನವಾಗಿ ಆರಂಭಿಸಿದ ಆಹಾರ ಕೋಣೆಯು ರೋಗಿಗಳಿಗೆ ನಿರಂತರವಾಗಿ ಉತ್ತಮ ದರ್ಜೆಯ ಆಹಾರ ಪೂರೈಸಲು ನೆರವಾಗಲಿದೆ ಎಂದರು.
ಆಸ್ಪತ್ರೆಗೆ ಆಗಮಿಸುವ ಪ್ರತಿಯೊಬ್ಬ ಬಡ ರೋಗಿಗೂ ಗುಣಮಟ್ಟದ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ರಹೀಂ ಖಾನ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠಾಲರಾವ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ, ಸಹಾಯಕ ಆಯುಕ್ತ ಅಭಿನವ್ ಜೈನ್, ಬ್ರೀಮ್ಸ್ ನಿರ್ದೇಶಕಿ ಡಾ. ಶಾಂತಲಾ ಕೌಜಲಗಿ ಹಾಗೂ ಮುಖ್ಯ ಅಡಳಿತಾಧಿಕಾರಿ ಪ್ರಕಾಶ್ ಸೂರ್ಯವಂಶಿ ಸೇರಿದಂತೆ ಜಿಲ್ಲಾ ಶಸ್ತ್ರಚಿಕಿತ್ಸಕರು, ವೈದ್ಯರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.






