ಕಾರಂಜಾ ಜಲಾಶಯ ಸುತ್ತಮುತ್ತಲಿನ ಪ್ರದೇಶಗಳಿಗೆ ಸಚಿವ ಈಶ್ವರ್ ಖಂಡ್ರೆ ಭೇಟಿ, ಪರಿಶೀಲನೆ

ಬೀದರ್ : ಕಾರಂಜಾ ಜಲಾಶಯ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಾದ ಕಣಜಿ ಸೇರಿದಂತೆ ಅತಿವೃಷ್ಟಿ ಪೀಡಿತ ಇತರ ಗ್ರಾಮಗಳಿಗೆ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.
ಭಾರಿ ಮಳೆಯಿಂದಾಗಿ ಹೆಸರು, ಉದ್ದು, ತೊಗರಿ ಹಾಗೂ ಸೋಯಾಬೀನ್ ಬೆಳೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಹಲವೆಡೆ ಮನೆಗಳು ಕುಸಿತಗೊಂಡಿರುವುದರಿಂದ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯರ ಸಮಸ್ಯೆಗಳು ಆಲಿಸಿದ ಅವರು, ಶೀಘ್ರದಲ್ಲೇ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲೆಯ ಜೀವನಾಡಿಯಾದ ಕಾರಂಜಾ ಜಲಾಶಯಕ್ಕೆ ಭೇಟಿ ನೀಡಿದ ಸಚಿವರು, ಜಲಾಶಯದ ಸ್ಥಿತಿಗತಿ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಪ್ರಸ್ತುತ 7 ಟಿಎಂಸಿ ಸಾಮರ್ಥ್ಯದ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. 10 ಸಾವಿರ ಕ್ಯೂಸೆಕ್ ನೀರು ಒಳಹರಿವುಯಾಗುತ್ತಿದ್ದು, ಜಲಾಶಯದಲ್ಲಿನ 13 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ನಿಬಂಧನೆಗಳಿಗೆ ಅನುಗುಣವಾಗಿ ಜಲಾಶಯದ ಸ್ಥಿತಿಗತಿ ಕಾಪಾಡಿಕೊಂಡು, ಜನರ ಜೀವ ಮತ್ತು ಆಸ್ತಿಗೆ ಯಾವುದೇ ಅಪಾಯವಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.







