ನಿರಂತರ ಮಳೆ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಅಧಿಕಾರಿಗಳಿಗೆ ಶಾಸಕ ಪ್ರಭು ಚೌವ್ಹಾಣ್ ಸೂಚನೆ

ಬೀದರ್ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಜನತೆಗೆ ತೊಂದರೆಯಾಗುತ್ತಿದ್ದು, ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಲಾಗಿದೆ ಎಂದು ಶಾಸಕ ಪ್ರಭು ಚೌವ್ಹಾಣ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಔರಾದ್ (ಬಿ) ಹಾಗೂ ಕಮಲನಗರ ತಹಸೀಲ್ದಾರರಿಗೆ ದೂರವಾಣಿ ಮೂಲಕ ಮಾತನಾಡಿ, ನಿರಂತರ ಮಳೆಯಿಂದಾಗಿ ಈಗಾಗಲೇ ಕೆಲವೆಡೆ ಮನೆ ಹಾನಿಯಾಗಿರುವ ಬಗ್ಗೆ ವರದಿಗಳಾಗಿವೆ. ತಮ್ಮ ಅಧೀನದಲ್ಲಿ ಬರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಜಬಾಬ್ದಾರಿಯಿಂದ ಕೆಲಸ ಮಾಡುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ ಎಂದಿದ್ದಾರೆ.
ಜಿಲ್ಲೆಯಲ್ಲಿ ಇನ್ನು ಮಳೆಯಾಗುವ ಸಾಧ್ಯತೆಗಳಿದ್ದು, ಇಲಾಖೆಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ಕೆಲಸ ಮಾಡಬೇಕು. ಮೊಬೈಲ್ ಫೋನ್‌ಗಳನ್ನು ಚಾಲ್ತಿಯಲ್ಲಿಡಬೇಕು. ಸಾರ್ವಜನಿಕರಿಂದ ಬರುವ ಎಲ್ಲ ಕರೆಗಳಿಗೆ ಸ್ಪಂದಿಸಬೇಕು ಎಂದು ಕಟ್ಟುನಿಟ್ಟಾಗಿ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಗ್ರಾಮ ಸೇವಕರು ಕಡ್ಡಾಯವಾಗಿ ಗ್ರಾಮಗಳಲ್ಲಿ ಕೆಲಸ ಮಾಡಬೇಕು. ಮನೆ ಹಾನಿಯಂತ ಘಟನೆಗಳು ನಡೆದಲ್ಲಿ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸರ್ಕಾರಕ್ಕೆ ನಿಖರವಾದ ವರದಿ ಸಲ್ಲಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆಗಳು ಅಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಮಳೆಯಿಂದಾಗಿ ಮನೆಗಳ ಹಾನಿ, ಮನೆಗಳಿಗೆ ನೀರು ನುಗ್ಗುವುದು ಸೇರಿದಂತೆ ಯಾವುದೇ ರೀತಿಯ ಅವಘಡಗಳು ಆದಲ್ಲಿ ತಹಸೀಲ್ದಾರರ ಗಮನಕ್ಕೆ ತರಬೇಕು. ಲಿಖಿತವಾಗಿ ಪತ್ರ ನೀಡಿದಲ್ಲಿ ಅದರ ಒಂದು ಪ್ರತಿಯನ್ನು ನನ್ನ ಕಛೇರಿಗೆ ಸಲ್ಲಿಸಬೇಕು ಎಂದು ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.







