ಸರಕಾರಿ ಯೋಜನೆಗಳು ಸಾರ್ವಜನಿಕರಿಗೆ ದೊರೆಯುವಂತೆ ಅಧಿಕಾರಿಗಳು ಗಮನ ಹರಿಸಬೇಕು : ಸಂಸದ ಸಾಗರ್ ಖಂಡ್ರೆ

ಬೀದರ್ : ಜಿಲ್ಲೆಯಲ್ಲಿ ಸರಕಾರಿ ಯೋಜನೆಗಳು, ಸಾಲ ಸೌಲಭ್ಯ ಸಾರ್ವಜನಿಕರಿಗೆ ಸಮರ್ಪಕವಾಗಿ ದೊರೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಬೇಕು ಎಂದು ಸಂಸದ ಸಾಗರ್ ಖಂಡ್ರೆ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಸಲಹಾ ಸಮಿತಿ (ಡಿಸಿಸಿ) ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಮಿತಿ (ಡಿಎಲ್ಆರ್ಸಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಬರ ಆವರಿಸಿದ್ದು, ರೈತರು ಬೆಳೆ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ ತಕ್ಷಣ ಸಾಲ ಸೌಲಭ್ಯ ಒದಗಿಸಿ ರೈತರ ಹಿತ ಕಾಪಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆಯಾಗದಂತೆ ಸಾಲ ನೀಡಬೇಕು. ಕರ್ನಾಟಕ ಬ್ಯಾಂಕ್ ರೈತರಿಗೆ ಸಾಲ ನೀಡುವಲ್ಲಿ ಸಾಧನೆ ಕುಂಠಿತವಾಗಿದ್ದು, ಮುಂದಿನ ದಿನಗಳಲ್ಲಿ ನಿಗದಿಪಡಿಸಿದ ಸಾಧನೆ ಮಾಡಬೇಕು ಎಂದರು.
ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ, ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಾಲ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿಗಳಲ್ಲಿ ಸಾಲ ಹೇಗೆ ಪಡೆಯಬೇಕು ಎಂಬ ಕುರಿತು ವಿವರ ನೀಡಿ ಪ್ರಚಾರ ಮಾಡಬೇಕು. ಸಾಲ ಬಯಸುವ ಯಾವೊಬ್ಬ ವಿದ್ಯಾರ್ಥಿಯೂ ವಂಚಿತರಾಗದಂತೆ ಕಾರ್ಯಕ್ರಮ ಆಯೋಜಿಸಿ ಸಾಲ ಸಿಗುವಂತಾಗಬೇಕು ಎಂದು ತಿಳಿಸಿದರು.
ಸಣ್ಣ ಸಣ್ಣ ಉದ್ದಿಮೆಗಳನ್ನು ಸ್ಥಾಪಿಸಲು ಫಲಾನುಭವಿಗಳು ಮುಂದೆ ಬಂದಾಗ ಅರ್ಜಿಗಳನ್ನು ಸ್ವೀಕರಿಸಿ, ಯೋಜನೆಗಳಿಂದ ವಂಚಿತರಾಗದಂತೆ ಕ್ರಮ ವಹಿಸಬೇಕು. ಈ ದೃಷ್ಟಿಯಿಂದ ಇಲಾಖೆಯ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳು ಸಮನ್ವಯ ಸಾಧಿಸಬೇಕು. ಮುದ್ರಾ ಯೋಜನೆಯಡಿ ಶಿಶು ಸಾಲ ನೀಡುವಲ್ಲಿ ಬಹಳ ಕಡಿಮೆ ಸಾಧನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅದನ್ನು ಸುಮಾರು ಶೇ.50 ರಷ್ಟು ಹೆಚ್ಚಿಸಬೇಕು ಎಂದು ಅವರು ಸೂಚಿಸಿದರು.
ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಪಿಎಂಜೆಜೆಬಿವೈ ಹಾಗೂ ಪಿಎಂಎಸ್ಬಿವೈ ವಿಮೆಗಳನ್ನು ಪ್ರತಿಯೊಬ್ಬರಿಗೂ ಪರಿಚಯಿಸಬೇಕು. ಈ ಕುರಿತು ಗ್ರಾಮೀಣ ಭಾಗದಲ್ಲಿ ಸಭೆಗಳನ್ನು ಆಯೋಜಿಸಬೇಕು. ಈ ವಿಮೆಯಿಂದ ಸಿಗುವ ಲಾಭಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಪ್ರತಿಯೊಬ್ಬರೂ ಈ ಯೋಜನೆಗಳನ್ನು ಅಳವಡಿಸಿಕೊಳ್ಳುವಂತೆ ಮನವರಿಕೆ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್, ಲೀಡ್ ಬ್ಯಾಂಕ್ ಮ್ಯಾನೇಜರ್ ಪವನ್ ಪೂಜಾರಿ, ಎಸ್ಬಿಐ ಅಧಿಕಾರಿ ಜಗದೀಶ್, ಮುಂಡಿರಾಜರೆಡ್ಡಿ, ಸರವಣನ್ ಶಿವಾನಂದನ್, ಜಯ್ ಕುಮಾರ್, ಮಂಜುನಾಥ್ ರೆಡ್ಡಿ, ರಮೇಶ್ ಶಿಂಧೆ, ವಿಷ್ಣುಕಾಂತ್ ಪಾತೇಪುರೆ ಸೇರಿದಂತೆ ವಿವಿಧ ನಿಗಮ ಮಂಡಳಿಗಳ ವ್ಯವಸ್ಥಾಪಕರು ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.






