ಶೀಘ್ರದಲ್ಲೇ ಬೀದರ್‌ನಲ್ಲಿ ರಾಷ್ಟ್ರಮಟ್ಟದ ಕ್ರೀಡಾಂಗಣ ನಿರ್ಮಾಣ : ಸಚಿವ ಈಶ್ವರ್ ಖಂಡ್ರೆ

ಬೀದರ್ : ಶೀಘ್ರದಲ್ಲೇ ಜಿಲ್ಲೆಯಲ್ಲಿ ರಾಷ್ಟ್ರಮಟ್ಟದ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು.
ಇಂದು ನಗರದ ಹೊರವಲಯದ ಅತಿವಾಳ್ ಕ್ರಾಸ್ ಹಾಗೂ ರೇಷ್ಮೆ ಇಲಾಖೆ ಆವರಣ ಪ್ರದೇಶದಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಂಗಣ ನಿರ್ಮಾಣದ ಉದ್ದೇಶದಿಂದ ಅವರು ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಬೀದರ್ ಜಿಲ್ಲೆಯ ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಹಾಗೂ ಅತ್ಯಾಧುನಿಕ ಸೌಲಭ್ಯ ಒದಗಿಸುವ ಉದ್ದೇಶದಿಂದ ಶೀಘ್ರದಲ್ಲೇ ಸೂಕ್ತ ಸ್ಥಳವನ್ನು ಅಂತಿಮಗೊಳಿಸಿ ಅಗತ್ಯ ಅನುದಾನ ಒದಗಿಸಲಾಗುವುದು. ಜಿಲ್ಲೆಯಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಂಗಣ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯ ಯುವ ಪ್ರತಿಭೆಗಳ ಕ್ರೀಡಾ ಹಾದಿಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ಈ ಯೋಜನೆ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಹಾಗೂ ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.





