ಕುಡಿಯುವ ನೀರಿನ ಅಭಾವ ತಡೆಗೆ ಅಗತ್ಯ ಕ್ರಮ : ಸಚಿವ ಈಶ್ವರ್ ಖಂಡ್ರೆ

ಬೀದರ್ : ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಸಾರ್ವಜನಿಕರಿಗೆ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಸರ್ಕಾರ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕುಡಿಯುವ ನೀರಿನ ನಿರ್ವಹಣೆಗೆ ಇದುವರೆಗೆ 306 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಗ್ರಾಮೀಣ ಭಾಗದ ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೆ ತಲಾ 1 ಕೋಟಿ ರೂ. ಸೇರಿದಂತೆ ವಿವಿಧ ಕ್ರಿಯಾ ಯೋಜನೆಗಳಿಗೆ ಹೆಚ್ಚುವರಿ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.
ಬೀದರ್ ಜಿಲ್ಲೆಗೆ ಈಗಾಗಲೇ 4 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 6 ಕೋಟಿ ರೂ. ಹೆಚ್ಚುವರಿ ಅನುದಾನ ಮಂಜೂರು ಮಾಡಲಾಗಿದೆ. ಬತ್ತಿರುವ ಕೊಳವೆಬಾವಿಗಳಿರುವ ಗ್ರಾಮಗಳಲ್ಲಿ ಹೊಸ ಕೊಳವೆಬಾವಿ ಕೊರೆಸುವುದು, ಬಾಡಿಗೆ ಕೊಳವೆಬಾವಿ ಬಳಸುವುದು ಹಾಗೂ ಟ್ಯಾಂಕರ್ ಮೂಲಕ ನೀರು ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ 24 ಗಂಟೆಗಳೊಳಗೆ ಪರಿಹಾರ ಕಲ್ಪಿಸುವಂತೆ ನಿರ್ದೇಶನ ನೀಡಿರುವುದಾಗಿ ಹೇಳಿದರು.
ಬರ ಘೋಷಣೆಗೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳು ಅವೈಜ್ಞಾನಿಕವಾಗಿದ್ದು, ಉಪಗ್ರಹ ಚಿತ್ರಣ, ಮಣ್ಣಿನ ತೇವಾಂಶ ಮತ್ತು ಸಸ್ಯವರ್ಗದ ಆಧಾರದ ಮೇಲೆ ಬರ ನಿರ್ಧರಿಸುವ ವ್ಯವಸ್ಥೆಯಿಂದ ನೈಜ ಸಂಕಷ್ಟದಲ್ಲಿರುವ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಅವರು ಆರೋಪಿಸಿದರು.
ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳೆ ಹಾನಿಯಾಗಿದ್ದರೂ ಕೇಂದ್ರದ ಕಠಿಣ ಮಾರ್ಗಸೂಚಿಗಳಿಂದ ಬರ ಘೋಷಣೆಗೆ ತೊಡಕಾಗಿದೆ. ಈ ಮಾನದಂಡಗಳನ್ನು ಸಡಿಲಗೊಳಿಸುವಂತೆ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ನಿಯೋಗದಿಂದ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಬರ ಘೋಷಣೆಯಾಗಿದ್ದು, ಭಾಲ್ಕಿ ತಾಲೂಕಿನಲ್ಲಿ ಕೃಷಿ ಮತ್ತು ಕಂದಾಯ ಇಲಾಖೆಗಳು ಜಂಟಿಯಾಗಿ ಗ್ರೌಂಡ್ ಟ್ರೂಥಿಂಗ್ ಪರಿಶೀಲನೆ ನಡೆಸಲಿವೆ. ಕಳೆದ ವರ್ಷ ರೈತರಿಗೆ 264 ಕೋಟಿ ರೂ. ಬೆಳೆ ವಿಮೆ ಹಾಗೂ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ರಾಜ್ಯ ಸರ್ಕಾರದ ಟಾಪ್-ಅಪ್ ಸೇರಿ 525 ಕೋಟಿ ರೂ.ಗೂ ಹೆಚ್ಚು ಪರಿಹಾರವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಗ್ರಾಮೀಣ ವಲಸೆ ತಡೆಯಲು ಜುಲೈ 1ರಿಂದ ಜಿಲ್ಲೆಯ 181 ಗ್ರಾಮ ಪಂಚಾಯತಿಗಳಲ್ಲಿ ಉದ್ಯೋಗ ಖಾತ್ರಿ ಕಾಮಗಾರಿಗಳನ್ನು ಚುರುಕುಗೊಳಿಸಲಾಗಿದ್ದು, ಕಳೆದ ಎರಡು ತಿಂಗಳಲ್ಲಿ 110 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಸಲಾಗಿದೆ ಎಂದು ಹೇಳಿದರು.
ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ), ಮಹಾತ್ಮ ಗಾಂಧಿ ಸಕ್ಕರೆ ಕಾರ್ಖಾನೆ ಹಾಗೂ ಎನ್‌ಎಸ್‌ಎಸ್‌ಕೆ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು, ಆಡಳಿತ ಮಂಡಳಿಗಳ ನಿರ್ಲಕ್ಷ್ಯ ಹಾಗೂ ಅಕ್ರಮಗಳ ಕುರಿತು ತನಿಖೆಗೆ ಸೂಚಿಸಲಾಗಿದೆ. ಜಿಲ್ಲೆಯ ಸುಮಾರು ನಾಲ್ಕು ಲಕ್ಷ ರೈತರಿಗೆ ಜೀವನಾಡಿಯಾಗಿರುವ ಡಿಸಿಸಿ ಬ್ಯಾಂಕ್ ಮತ್ತು ಠೇವಣಿದಾರರ ಹಿತಾಸಕ್ತಿ ಕಾಪಾಡಲು ಕಾರ್ಖಾನೆಗಳನ್ನು ಲೀಸ್‌ಗೆ ನೀಡುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮೀತ್ ಸುಭಾಷರಾವ್ ಪಾಟೀಲ್ ಉಪಸ್ಥಿತರಿದ್ದರು.






