ವಿದ್ಯಾರ್ಥಿಗಳಿಗೆ ಗುಣಮಟ್ಟದ ಸೌಲಭ್ಯ ಕಲ್ಪಿಸುವಲ್ಲಿ ರಾಜಿ ಬೇಡ: ಅಧಿಕಾರಿಗಳಿಗೆ ಯು.ಟಿ.ಖಾದರ್ ತಾಕೀತು
ವಸತಿ ಶಾಲೆಗಳಲ್ಲಿ ಎಐ ಆಧಾರಿತ ಸಿಸಿಟಿವಿ ಅಳವಡಿಕೆ; ಶಿಕ್ಷಣ ಮತ್ತು ಆರೋಗ್ಯ ಸೇವೆಗಳ ಸುಧಾರಣೆಗೆ ಸಚಿವರ ಒತ್ತು

ಬೀದರ್: ವಿದ್ಯಾರ್ಥಿಗಳಿಗೆ ವಿತರಿಸುವ ಬಿಸಿ ಊಟ, ಸಮವಸ್ತ್ರ, ಬ್ಯಾಗ್ ಮತ್ತು ಶೂಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಅಳತೆಗೆ ಸರಿಹೊಂದದ ಅಥವಾ ಕಳಪೆ ಗುಣಮಟ್ಟದ ಸಾಮಗ್ರಿಗಳು ಪೂರೈಕೆಯಾದರೆ, ಅವುಗಳನ್ನು ಮಕ್ಕಳಿಗೆ ವಿತರಿಸದೆ ತಕ್ಷಣವೇ ವಾಪಸ್ ಕಳುಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ರವಿವಾರ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಾಂಶುಪಾಲರು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳಿಗಿಂತಲೂ ಉತ್ತಮ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಕಡಿಮೆ ಇರುವುದರಿಂದ ಹೊಸ ಶಾಲೆಗಳನ್ನು ಮಂಜೂರು ಮಾಡುವ ಬದಲು, ಈಗಾಗಲೇ ಇರುವ ಮೌಲಾನಾ ಆಜಾದ್ ವಸತಿ ಶಾಲೆಗಳ ಖಾಲಿ ಸೀಟುಗಳನ್ನು ಭರ್ತಿ ಮಾಡಿ ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ ನೀಡಬೇಕು ಎಂದರು.
ದೈಹಿಕ ಶಿಕ್ಷಣ ಶಿಕ್ಷಕರಿಗೆ 10 ದಿನಗಳ ತರಬೇತಿ ನೀಡಿ, ಕಬಡ್ಡಿ, ಖೋ-ಖೋ, ಫುಟ್‌ಬಾಲ್ ಹಾಗೂ ಕ್ರಿಕೆಟ್‌ನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಯಾವುದೇ ಪ್ರಭಾವಕ್ಕೆ ಮಣಿಯದೆ ಆಯ್ಕೆ ಮಾಡಿ ಜಿಲ್ಲಾ ಮತ್ತು ರಾಜ್ಯ ಮಟ್ಟದ ತಂಡಗಳನ್ನು ರೂಪಿಸಬೇಕು. ಪ್ರತಿ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಆರಂಭಿಸಬೇಕು. ಗಣ್ಯರು ಜಿಲ್ಲೆಗೆ ಆಗಮಿಸಿದಾಗ ವಸತಿ ಶಾಲೆಯ ಮಕ್ಕಳ ಬ್ಯಾಂಡ್ ತಂಡವೇ ಗೌರವ ವಂದನೆ ಸಲ್ಲಿಸುವಂತಾಗಬೇಕು. ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ಶಾಲಾ ಹಾಗೂ ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದು ನಿರ್ದೇಶನ ನೀಡಿದರು.
ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಹಾಸ್ಟೆಲ್ ಮತ್ತು ಶಾಲೆಗಳಲ್ಲಿ ಎಐ ಆಧಾರಿತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ವಾರ್ಡನ್‌ಗಳ ಹಾಜರಾತಿ ಹಾಗೂ ಅಡುಗೆಮನೆಯ ಸ್ವಚ್ಛತೆಯ ಮೇಲೆ ನಿಗಾ ಇಡಲಾಗುವುದು. ಸಿಬ್ಬಂದಿ ಕೊರತೆ ನೀಗಿಸಲು ಎಂಟು ಗಂಟೆಗಳ ಪಾಳಿ ವ್ಯವಸ್ಥೆ ಜಾರಿಗೊಳಿಸುವುದರ ಜೊತೆಗೆ ಹೆಚ್ಚುವರಿ ಸಿಬ್ಬಂದಿ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು. ಬಾಕಿ ಇರುವ ವಿದ್ಯಾರ್ಥಿವೇತನದ ದಾಖಲೆಗಳನ್ನು ಕೇಂದ್ರ ಕಚೇರಿಯೊಂದಿಗೆ ಸಮನ್ವಯ ಸಾಧಿಸಿ ಶೀಘ್ರ ಇತ್ಯರ್ಥಪಡಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಆಸ್ಪತ್ರೆಗಳ ನಿರ್ವಹಣೆಗೆ ಒತ್ತು:
ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಿತಿಗತಿ ಕುರಿತು ಸಚಿವರು ವಿಸ್ತೃತ ಚರ್ಚೆ ನಡೆಸಿದರು. ಆಸ್ಪತ್ರೆಗಳಲ್ಲಿ ನರ್ಸ್‌ಗಳ ಕೊರತೆ ಇಲ್ಲದಿದ್ದರೂ, ಕೆಲವೆಡೆ ಆಂಬ್ಯುಲೆನ್ಸ್ ಚಾಲಕರ ಕೊರತೆಯಿದೆ. ಈ ಸಮಸ್ಯೆ ನಿವಾರಿಸಲು ಹೊರಗುತ್ತಿಗೆ ಆಧಾರದ ಮೇಲೆ ಅಥವಾ ಡಿ-ಗ್ರೂಪ್ ಸಿಬ್ಬಂದಿಯ ಮೂಲಕ ಸೇವೆ ಸುಗಮಗೊಳಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಬಸವಕಲ್ಯಾಣ, ಹುಮನಾಬಾದ್, ಭಾಲ್ಕಿ ಮತ್ತು ಔರಾದ್ ತಾಲೂಕು ಆಸ್ಪತ್ರೆಗಳು ಹಾಗೂ ಎಂಸಿಎಚ್ ಆಸ್ಪತ್ರೆಗಳ ಹೊರರೋಗಿ, ಒಳರೋಗಿ ಮತ್ತು ಹೆರಿಗೆ ಸೇವೆಗಳ ಪ್ರಗತಿ ಕುರಿತು ಮಾಹಿತಿ ಪಡೆದರು. ರಾತ್ರಿ ವೇಳೆ ಅಥವಾ ತುರ್ತು ಸಂದರ್ಭಗಳಲ್ಲಿ ದಾಖಲಾಗುವ ಹೈ-ರಿಸ್ಕ್ ಪ್ರಕರಣಗಳನ್ನು ಸ್ಥಳೀಯವಾಗಿಯೇ ನಿರ್ವಹಿಸಲು ಫಿಸಿಷಿಯನ್‌ಗಳ ಕೊರತೆ ನೀಗಿಸಬೇಕು. ಎಚ್‌ಡಿಯು ಹಾಗೂ ಪೀಡಿಯಾಟ್ರಿಕ್ ಐಸಿಯು ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂಸದ ಸಾಗರ್ ಖಂಡ್ರೆ ಮಾತನಾಡಿ, ಜಿಲ್ಲೆಯ ಜನರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾಲಾ ಬಿ. ನಾರಾಯಣರಾವ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠಾಲರಾವ್, ಶಾಸಕ ರಹೀಂ ಖಾನ್, ಕೆಎಂಡಿಸಿ ಉಪಾಧ್ಯಕ್ಷ ಸಂಜಯ್ ಜಾಗೀರದಾರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಬಳಿರಾಮ್ ಕುಶಾಲರಾವ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ಉಪಸ್ಥಿತರಿದ್ದರು.






