ಕ್ರೀಡೆಯಿಂದ ದೈಹಿಕ, ಮಾನಸಿಕ ಬೆಳವಣಿಗೆ: ಶಾಸಕ ಪ್ರಭು ಚೌವ್ಹಾಣ್

ಬೀದರ್: ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಓದಿನೊಂದಿಗೆ ಕ್ರೀಡೆಗೂ ಮಹತ್ವ ನೀಡಬೇಕು ಎಂದು ಶಾಸಕ ಪ್ರಭು ಚೌವ್ಹಾಣ್ ಅವರು ತಿಳಿಸಿದರು.
ಇಂದು ಔರಾದ(ಬಿ) ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ 2025-26ನೇ ಸಾಲಿನ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದುಶ್ಚಟಗಳಿಗೆ ಬಲಿಯಾದವರು ಆಯಸ್ಸನ್ನು ಕಳೆದುಕೊಳ್ಳುತ್ತಾರೆ. ಹಾಗಾಗಿ ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ಆಟ ಪಾಠಗಳಲ್ಲಿ ತೊಡಗಿಸಿಕೊಳ್ಳಬೇಕು. ಯೋಗಾಭ್ಯಾಸ ರೂಢಿಸಿಕೊಳ್ಳಬೇಕು. ವಿದ್ಯಾಭ್ಯಾಸ ಮುಗಿಯುವವರೆಗೆ ಸರ್ವಗುಣ ಸಂಪನ್ನರಾಗಿ ಹೊರಬರಬೇಕು. ಇದಕ್ಕಾಗಿ ಶಿಕ್ಷಕರ ಪಾತ್ರ ಸಾಕಷ್ಟಿದೆ ಎಂದರು.
ಇತ್ತೀಚಿಗೆ ವಿದ್ಯಾರ್ಥಿಗಳು ಕೇವಲ ಕ್ರಿಕೆಟ್‌ಗೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. ಇದರ ಬದಲಿಗೆ ಕಬ್ಬಡ್ಡಿ, ಖೋಖೋ, ಹಾಕಿ, ವಾಲಿಬಾಲ್ ನಂತಹ ಆಟಗಳು ಆಡಬೇಕು. ನಮ್ಮ ವಿದ್ಯಾರ್ಥಿಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಬೇಕು. ಹಾಗಾಗಿ ತಾವೆಲ್ಲರೂ ನಾನು ಗೆದ್ದೇ ಗೆಲ್ಲುತ್ತೇವೆ ಎಂಬ ಸಂಕಲ್ಪದೊಂದಿಗೆ ಆಟವಾಡಬೇಕು. ಎಲ್ಲ ಸ್ಪರ್ಧೆಗಳಲ್ಲಿ ಜಯಿಸಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಲು ಯತ್ನಿಸಬೇಕು. ಇದರಿಂದ ತಾಲ್ಲೂಕಿನ ಕೀರ್ತಿ ವೃದ್ಧಿಸುವ ಜೊತೆಗೆ ತಾವು ಬೆಳವಣಿಗೆ ಹೊಂದಬಹುದು ಎಂದು ಸಲಹೆ ನೀಡಿದರು.
ಕ್ಷೇತ್ರದಲ್ಲಿ ಶಿಕ್ಷಣದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ಪೂರಕವಾದ ವಾತಾವರಣ ನಿರ್ಮಿಸಿದ್ದೇನೆ. ವಿದ್ಯಾರ್ಥಿಗಳು ಸರಿಯಾಗಿ ಆಟವಾಗಿ ತಮ್ಮ ಭವಿಷ್ಯ ಸುಧಾರಿಸಿಕೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ಗೆಲುವು ಸಾಧಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಪ್ರಕಾಶ್ ರಾಠೋಡ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಂಢರಿ ಆಡೆ, ದೈಹಿಕ ಶಿಕ್ಷಣ ಪರಿವೀಕ್ಷಕ ಯಶವಂತ್ ಡೊಂಬಾಳೆ, ಶಿವಕುಮಾರ್, ಸಂಜು ಮೇತ್ರೆ, ಸಚಿನ್ ರಾಠೋಡ್, ಕೇರಬಾ ಪವಾರ್ ಹಾಗೂ ವಸಂತ್ ರಾಠೋಡ್ ಸೇರಿದಂತೆ ಇತರರು ಉಪಸ್ಥಿತರಿದ್ದರು.







