ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ್ : ಪ್ರತಿ ವರ್ಷದಂತೆ ಈ ವರ್ಷವು ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಹೇಳಿದರು.
ಇಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಿಧ ಇಲಾಖೆಯ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಸೆ.17 ರ ಬೆಳಿಗ್ಗೆ 7:45 ಗಂಟೆಗೆ ಎಲ್ಲಾ ಸರಕಾರಿ ಹಾಗೂ ಅರೆ ಸರಕಾರಿ ಕಚೇರಿ ಮತ್ತು ಶಾಲಾ, ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕು. 8:15 ಗಂಟೆಗೆ ಬಸವೇಶ್ವರ್ ವೃತ್ತದಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಭಾವಚಿತ್ರದೊಂದಿಗೆ ಮೆರವಣಿಗೆಯು ಭಗತ್ ಸಿಂಗ್ ವೃತ್ತ, ಅಂಬೇಡ್ಕರ್ ವೃತ್ತ, ಜನರಲ್ ಕಾರಿಯಪ್ಪ ವೃತ್ತದಿಂದ ನಗರದ ಜಿಲ್ಲಾ ನೆಹರು ಕ್ರೀಡಾಂಗಣಕ್ಕೆ ಬಂದು ಸೇರಿ 9 ಗಂಟೆಗೆ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಇರುತ್ತದೆ. ಸೆ.16 ಮತ್ತು 17 ರಂದು ಎಲ್ಲಾ ಸರಕಾರಿ ಕಚೇರಿಗಳ ಮೇಲೆ ದೀಪಾಲಂಕಾರ ಮಾಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸುವುದಕ್ಕಾಗಿ ಒಂದು ಸಮಿತಿ ರಚಿಸಲಾಗಿದೆ. ಲೋಕೋಪಯೋಗಿ ಇಲಾಖೆಯವರು ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಮಳೆಯಿಂದ ಸಮಸ್ಯೆ ಆಗದಂತೆ ಮತ್ತು ವೇದಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಚತೆ ಮತ್ತು ಮೂಲಭೂತ ಸೌಕರ್ಯಗಳು ಇರುವಂತೆ ನೋಡಿಕೊಳ್ಳಬೇಕು. ಶಿಕ್ಷಣ ಇಲಾಖೆ ವತಿಯಿಂದ ಕಲ್ಯಾಣ ಕರ್ನಾಟಕ ವಿಮೋಚನೆಗೆ ಸಂಬಂಧಿಸಿದಂತೆ ಪ್ರಬಂಧ, ನಿಬಂಧ, ಭಾಷಣ, ವೇಷಭೂಷಣ ಸ್ಪರ್ದೆಗಳನ್ನು ಶಾಲಾ, ಕಾಲೇಜುಗಳಲ್ಲಿ ಏರ್ಪಡಿಸುವುದರ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ್ ಬಿ.ಕರಾಳೆ, ಬೀದರ್ ಸಹಾಯಕ ಆಯುಕ್ತ ಎಂ.ಡಿ.ಶಕೀಲ್, ಮಹಾನಗರ ಪಾಲಿಕೆಯ ಆಯುಕ್ತ ಶಿವರಾಜ್ ರಾಥೋಡ್, ಡಿವೈಎಸ್ಪಿ ಶಿವನಗೌಡ ಪಾಟೀಲ್, ಪ್ರೊ.ಜಗನ್ನಾಥ್ ಹೆಬ್ಬಾಳೆ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ವಿಜಯಕುಮಾರ್ ಸೋನಾರೆ ಸೇರಿದಂತೆ ಇತರೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.







