ರೈಲ್ವೆ ಕೆಳ ಸೇತುವೆ ಕಾಮಗಾರಿ ಎಂಟು ತಿಂಗಳಲ್ಲಿ ಪ್ರಾರಂಭ : ಸಂಸದ ಸಾಗರ್ ಖಂಡ್ರೆ

ಬೀದರ್ : ನಗರದ ಹಳೆ ಆದರ್ಶ ಕಾಲೋನಿಯ ನ್ಯಾಷನಲ್ ಕಾಲೇಜು ಸಮೀಪ ರೈಲ್ವೆ ಕೆಳ ಸೇತುವೆ ನಿರ್ಮಾಣ ಕಾಮಗಾರಿ ಮುಂದಿನ 8 ರಿಂದ 9 ತಿಂಗಳಲ್ಲಿ ಆರಂಭಿಸಲಾಗುವುದು ಎಂದು ಸಂಸದ ಸಾಗರ್ ಖಂಡ್ರೆ ತಿಳಿಸಿದ್ದಾರೆ.
ಗುರುವಾರ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಕಾಮಗಾರಿಯ ಸಾಧಕ-ಬಾಧಕಗಳ ಕುರಿತು ಚರ್ಚಿಸಿದ ಬಳಿಕ ಅವರು ಮಾತನಾಡಿದರು.
ಹಳೆ ಆದರ್ಶ ಕಾಲೋನಿ ಭಾಗದಲ್ಲಿ ರೈಲ್ವೆ ಕೆಳ ಸೇತುವೆ ನಿರ್ಮಾಣವು ಜನರ ಬಹುಕಾಲದ ಬೇಡಿಕೆಯಾಗಿತ್ತು. ಕೆಲವು ತಾಂತ್ರಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳ ಕಾರಣದಿಂದ ಕಾಮಗಾರಿ ವಿಳಂಬವಾಗಿತ್ತು. ಇದೀಗ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಲು ವಾಯುಪಡೆ, ರೈಲ್ವೆ ಹಾಗೂ ಪುರಾತತ್ವ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿ ಸಮೀಕ್ಷೆ ನಡೆಸಲಾಗಿದೆ ಎಂದು ಹೇಳಿದರು.
ಸೇತುವೆ ನಿರ್ಮಾಣಕ್ಕೆ ವಾಯುಪಡೆಯ 0.33 ಎಕರೆ ಹಾಗೂ ಖಾಸಗಿ ಮಾಲಕತ್ವದ 0.33 ಎಕರೆ ಜಾಗ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ವಾಯುಪಡೆ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದರೆ ರಕ್ಷಣಾ ಸಚಿವಾಲಯದಿಂದ ಅನುಮೋದನೆ ನೀಡಲು ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿಸಿದರು.
ಸ್ಮಾರಕ ಪ್ರದೇಶಗಳಿರುವ ಹಿನ್ನೆಲೆಯಲ್ಲಿ ಪುರಾತತ್ವ ಇಲಾಖೆ ಸಹ ಅನುಮತಿ ನೀಡಲು ಸಹಕಾರ ವ್ಯಕ್ತಪಡಿಸಿದೆ. ಈಗಾಗಲೇ ಪ್ರಾಥಮಿಕ ವರದಿ ಸಿದ್ಧವಾಗಿದ್ದು, ಅಧಿಕಾರಿಗಳು ರೂಟ್ ಅಲೈನ್‌ಮೆಂಟ್ ಅಂತಿಮಗೊಳಿಸುವ ಕಾರ್ಯದಲ್ಲಿದ್ದಾರೆ ಎಂದು ಹೇಳಿದರು.
ಒಂದು ತಿಂಗಳೊಳಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ, ಅಗತ್ಯ ಎನ್‌ಒಸಿ ಪಡೆದು ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಲಾಗುವುದು. ರೈಲ್ವೆ ಕೆಳ ಸೇತುವೆ ನಿರ್ಮಾಣದಿಂದ ನಗರದ ಟ್ರಾಫಿಕ್ ಸಮಸ್ಯೆ ಕಡಿಮೆಯಾಗಿದ್ದು, ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಂಸದರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ರೈಲ್ವೆ ಇಲಾಖೆ, ವಾಯುಪಡೆ ಹಾಗೂ ಪುರಾತತ್ವ ಇಲಾಖೆಯ ಅಧಿಕಾರಿಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.






