ಕ್ರೀಡೆಯಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಗುವುದು : ಶಾಸಕ ಪ್ರಭು ಚವ್ಹಾಣ್
ಔರಾದ್‌ನಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಔರಾದ್: ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಗೆದ್ದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಕ್ಷೇತ್ರದ ಎಲ್ಲ ವಿದ್ಯಾರ್ಥಿಗಳಿಗೆ ಟ್ರ್ಯಾಕ್‌ಸೂಟ್ ನೀಡಲಾಗುವುದು. ರಾಜ್ಯ ಮಟ್ಟದಲ್ಲಿ ಪದಕ ಗೆಲ್ಲುವ ವಿದ್ಯಾರ್ಥಿಗಳಿಗೆ 21 ಸಾವಿರ ರೂ. ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ಶಾಸಕ ಪ್ರಭು ಚವ್ಹಾಣ್ ಘೋಷಿಸಿದರು.
ತಾಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಿಯು ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗೂ ಸಮಾನ ಆದ್ಯತೆ ನೀಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಕನಿಷ್ಠ ಒಂದು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡು ನಿರಂತರ ಅಭ್ಯಾಸ ಮಾಡಬೇಕು. ನಮ್ಮ ಕ್ಷೇತ್ರದ ವಿದ್ಯಾರ್ಥಿಗಳು ಒಲಿಂಪಿಕ್ ಸೇರಿದಂತೆ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡುವ ಮಟ್ಟಕ್ಕೆ ಬೆಳೆಯಬೇಕು ಎಂದು ಹಾರೈಸಿದರು.
ಕಬ್ಬಡ್ಡಿ, ಖೋ-ಖೋ, ಕುಸ್ತಿ ಸೇರಿದಂತೆ ದೇಶೀಯ ಮತ್ತು ಮಣ್ಣಿನ ಆಟಗಳು ನಮ್ಮ ಕ್ರೀಡಾ ಪರಂಪರೆಯ ಭಾಗವಾಗಿದ್ದು, ವಿದ್ಯಾರ್ಥಿಗಳು ಅವುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.
ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸುತ್ತದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಸೂಕ್ತ ತರಬೇತಿ ಮತ್ತು ಪ್ರೋತ್ಸಾಹ ನೀಡುವುದು ಅಗತ್ಯ ಎಂದು ಹೇಳಿದರು.
ಕ್ರೀಡಾಕೂಟ ಉದ್ಘಾಟನೆಯ ವೇಳೆ ಶಾಸಕ ಪ್ರಭು ಚವ್ಹಾಣ್ ವಿದ್ಯಾರ್ಥಿಗಳೊಂದಿಗೆ ಕಬ್ಬಡ್ಡಿ ಆಡಿದರು. ಕ್ರೀಡಾಂಗಣಕ್ಕಿಳಿದು ವಿದ್ಯಾರ್ಥಿಗಳೊಂದಿಗೆ ಆಟದಲ್ಲಿ ಭಾಗವಹಿಸಿದ ಅವರು ಕ್ರೀಡೆಯ ಬಗ್ಗೆ ತಮ್ಮ ಆಸಕ್ತಿ ವ್ಯಕ್ತಪಡಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಗುಂಡಪ್ಪಾ ಬಿರಾದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ರಾಠೋಡ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಓಂಪ್ರಕಾಶ್ ದಡ್ಡೆ, ಪ್ರಾಂಶುಪಾಲರ ಸಂಘದ ಓಂಕಾರ್ ಸೂರ್ಯವಂಶಿ, ಡಾ. ಮನ್ಮಥ್ ಡೋಳೆ, ಅಮರೇಶ್ವರ್ ಕಾಲೇಜಿನ ಪ್ರಾಚಾರ್ಯ ರೇವಣಯ್ಯ ಮಠ, ಠಾಣಾ ಕುಶನೂರ ಕಾಲೇಜಿನ ಪ್ರಾಂಶುಪಾಲ ವಿಜಯಕುಮಾರ್, ಜಿಲ್ಲಾ ಕ್ರೀಡಾ ಸಂಯೋಜಕ ಶರಣಪ್ಪ ನಾಟೇಕರ್, ತಾಲ್ಲೂಕು ದೈಹಿಕ ಶಿಕ್ಷಣ ಪರೀಕ್ಷಕ ಸಿದ್ದಾರೆಡ್ಡಿ ಹಾಗೂ ಪತ್ರಿಸ್ವಾಮಿ ಕಾಲೇಜಿನ ಪ್ರಾಂಶುಪಾಲ ಎಸ್.ಕೆ. ಅಖಿಲ್ ಸೇರಿದಂತೆ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.






