ಸ್ವಾತಂತ್ರ‍್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹೋರಾಟಗಾರರನ್ನು ದೇಶ ಎಂದಿಗೂ ಮರೆಯದು : ಸಚಿವ ಈಶ್ವರ್ ಖಂಡ್ರೆ

ಬೀದರ್ : ಸ್ವಾತಂತ್ರ‍್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹೋರಾಟಗಾರರನ್ನು ದೇಶ ಎಂದಿಗೂ ಮರೆಯದು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಹೇಳಿದರು.
ಇಂದು ಜಿಲ್ಲಾಡಳಿತ ವತಿಯಿಂದ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
1947ರ ಆ.15 ರಂದು ಬ್ರಿಟಿಷರ ದಾಸ್ಯದಿಂದ ಮುಕ್ತಿ ಪಡೆದು, ಹೊಸ ಮನ್ವಂತರಕ್ಕೆ ನಾಂದಿ ಹಾಡಿದ ಐತಿಹಾಸಿಕ ದಿನ ಇದಾಗಿದೆ. ಭಾರತದ ಸ್ವಾತಂತ್ರ‍್ಯ ಸಂಗ್ರಾಮದ ಇತಿಹಾಸ ಅತ್ಯಂತ ರೋಚಕವಾಗಿದ್ದು, ಸತ್ಯ, ಶಾಂತಿ, ಅಹಿಂಸೆಯ ಸಾತ್ವಿಕ ಹೋರಾಟದಿಂದ ಸ್ವಾತಂತ್ರ‍್ಯ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದರು.
ಸರ್ಕಾರದ ಮಹತ್ವಕಾಂಕ್ಷಿ 5 ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳು ಈಗಾಗಲೇ ಜಾರಿ ಮಾಡಲಾಗಿದ್ದು, ದೇಶಕ್ಕೆ ಮಾದರಿಯಾಗಿರುವ ಗ್ಯಾರಂಟಿ ಯೋಜನೆಗಳು ಜನರ ಜೀವನ ಮಟ್ಟ ಸುಧಾರಿಸುತ್ತಿವೆ ಮತ್ತು ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿವೆ. ನಮ್ಮ ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಬೊಕ್ಕಸ ಖಾಲಿಯಾಗುತ್ತದೆ ಎಂದು ವಿರೋಧ ಪಕ್ಷದವರು ಲೇವಡಿ ಮಾಡುತ್ತಿದ್ದರು. ಆದರೆ ಅವರೇ ಇವಾಗ ಬೇರೆ ಬೇರೆ ರಾಜ್ಯಗಳಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳು ಜಾರಿಗೊಳಿಸಲು ಹೊರಟಿದ್ದಾರೆ. ನಮ್ಮ ಸರ್ಕಾರದ ಬೊಕ್ಕಸ ಖಾಲಿಯಾಗಲಿಲ್ಲ. ಬದಲಾಗಿ ನಮ್ಮ ಸರ್ಕಾರ ಸಧೃಡವಾಗಿದ್ದು, ಅಭಿವೃದ್ಧಿ ಕೆಲಸಗಳು ಸಾಗುತ್ತಿವೆ ಎಂದು ಹೇಳಿದರು.
ಜಿಲ್ಲೆಯಲ್ಲಿ 36 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ಸೆಂಟರ್ ಆರಂಭ ಮಾಡಲಾಗುವುದು. ಈಗಾಗಲೇ ಕ್ಯಾಥ್ ಲ್ಯಾಬ್ ಉದ್ಘಾಟನೆ ಮಾಡಿದ್ದು, ಆದಷ್ಟು ಬೇಗ ಕಾರ್ಡಿಯಾಲಾಜಿಸ್ಟ್ ಮತ್ತು ಟೆಕ್ನಿಷಿಯನ್ ಗಳನ್ನು ನೇಮಿಸಿ ಶೀಘ್ರದಲ್ಲೇ ಆರಂಭ ಮಾಡಲಾಗುವುದು. 48 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಡಳಿತ ಸಂಕೀರ್ಣ 18 ತಿಂಗಳ ಒಳಗೆ ಪೂರ್ಣಗೊಳ್ಳಲಿದೆ. ಹಾಗೆಯೇ ಹೊಸ ತಾಲೂಕುಗಳಾದ ಚಿಟಗುಪ್ಪಾ, ಕಮಲನಗರ್ ಮತ್ತು ಹುಲಸುರು ನಲ್ಲಿ ಹೊಸ ಪ್ರಜಾಸೌಧ ನಿರ್ಮಾಣ ಮಾಡಲಾಗುವುದು ಎಂದರು.
ನಾನು ಅರಣ್ಯ ಸಚಿವನಾದ ಮೇಲೆ ಹಸಿರು ಹೊದುಕೆ ಹೆಚ್ಚಿಸಲು 35 ಲಕ್ಷ ಸಸಿಗಳು ನೆಡಲಾಗಿದೆ. ಕೆ.ಕೆ.ಆರ್.ಡಿ.ಬಿ ಯಿಂದ ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಹಸಿರು ಹೊದುಕೆ ಹೆಚ್ಚಿಸಲು 50 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಜಿಲ್ಲೆಯಲ್ಲಿ ಬರ್ಡ್ ಪಾರ್ಕ್, ಇಕೋ ಪಾರ್ಕ್, ಇಕೋ ಟೂರಿಸಂ ಪಾರ್ಕ್ ಮುಂತಾದವುಗಳನ್ನು ಕೈಗೊಳ್ಳಲಾಗಿದೆ. 25 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಿಸಲು ತೀರ್ಮಾನಿಸಲಾಗಿದೆ. ಈಗಾಗಲೇ ಇದರ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸ್ಥಳ ಹುಡುಕಲು ಸೂಚಿಸಲಾಗಿದೆ. ಈ ಕ್ರೀಡಾಂಗಣ ಸುಮಾರು 20 ರಿಂದ 25 ಎಕರೆ ಪ್ರದೇಶದಲ್ಲಿ ಇರಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದ ಸಾಗರ್ ಖಂಡ್ರೆ, ಬೀದರ್ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ.ನಾರಾಯಣ, ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್, ಬೀದರ್ ನಗರ ಪ್ರಾಧಿಕಾರದ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಿರೀಶ್ ಬದೋಲೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅರಣ್ಯ ಉಪ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಪ್ರೋಬಿಷನರಿ ಐಎಎಸ್ ಅಧಿಕಾರಿ ರಮ್ಯಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.







