ಪ್ರಜಾಪ್ರಭುತ್ವ ಉಳಿಸುವ ಹೊಣೆ ಎಲ್ಲರದು : ಸಚಿವ ಈಶ್ವರ್ ಖಂಡ್ರೆ
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ

ಬೀದರ್: ವಿಶ್ವದಲ್ಲೇ ಅತ್ಯಂತ ಬೃಹತ್ ಮತ್ತು ಮಾದರಿಯಾದ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯಲು ಹಾಗೂ ಯುವಜನತೆಯಲ್ಲಿ ಸಂವಿಧಾನದ ಅರಿವು ಮೂಡಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಕರೆ ನೀಡಿದರು.
ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಸಮಾಜದಲ್ಲಿ ಜಾತಿ-ಧರ್ಮದ ಹೆಸರಿನಲ್ಲಿ ಭಾವನೆಗಳನ್ನು ಕೆರಳಿಸಿ ಸಮಾಜವನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಸಂದರ್ಭಗಳಲ್ಲಿ ಸೋದರತ್ವ, ಸಹಬಾಳ್ವೆ ಮತ್ತು ಸಾಮರಸ್ಯವನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿಕಲ್ಪನೆಯಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಿ, ಆತ ಸಬಲನಾದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ಅಂಬೇಡ್ಕರ್ ಅವರ ಮೂರು ಸೂತ್ರಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಂಡು ಉನ್ನತ ಶಿಕ್ಷಣ ಪಡೆದು ಸ್ಪರ್ಧಾತ್ಮಕ ಜಗತ್ತಿನಲ್ಲಿ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಅವರು ಸಲಹೆ ನೀಡಿದರು.
ಸಂವಿಧಾನವು ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಆಡಳಿತವನ್ನು ಟೀಕಿಸುವ ಹಕ್ಕನ್ನು ನೀಡಿದೆ. ಆದರೆ ದ್ವೇಷ ಬಿತ್ತುವುದು ಅಥವಾ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಸ್ವಾತಂತ್ರ್ಯವಲ್ಲ. ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕುವುದು ಅಥವಾ ಚರ್ಚೆಯಿಲ್ಲದೆ ಶಾಸನಗಳನ್ನು ಅಂಗೀಕರಿಸುವುದು ಸಂವಿಧಾನದ ಆಶಯಕ್ಕೆ ಧಕ್ಕೆ ತರುತ್ತದೆ ಎಂದು ಅವರು ಹೇಳಿದರು.
12ನೇ ಶತಮಾನದಲ್ಲಿಯೇ ಬಸವಾದಿ ಶರಣರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ್ದರು. ಬುದ್ಧ, ಬಸವಣ್ಣ ಮತ್ತು ಡಾ. ಅಂಬೇಡ್ಕರ್ ಅವರ ತತ್ವಗಳನ್ನು ವೈಯಕ್ತಿಕ ಜೀವನದಲ್ಲಿ ಅಳವಡಿಸಿಕೊಂಡರೆ ಯಾವುದೇ ಸವಾಲನ್ನು ಎದುರಿಸಲು ಸಾಧ್ಯವಾಗುತ್ತದೆ ಎಂದು ಖಂಡ್ರೆ ತಿಳಿಸಿದರು.
ಕೆಕೆಆರ್‌ಡಿಬಿ ಅನುದಾನದಡಿ 15 ಕೋಟಿ ರೂ. ವೆಚ್ಚದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ಕೇಂದ್ರ ಸ್ಥಾಪನೆಗೆ ಅನುಮೋದನೆ ದೊರೆತಿದ್ದು, ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಲಿದೆ ಎಂದು ಅವರು ಘೋಷಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ರಹೀಮ್ ಖಾನ್ ಮಾತನಾಡಿ, ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಅವಕಾಶ ದೊರೆಯಲು ಸಂವಿಧಾನವೇ ಕಾರಣವಾಗಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಆದರ್ಶ ನಾಯಕರಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.
ಪ್ರಾಧ್ಯಾಪಕಿ ಡಾ. ಸುಮನಬಾಯಿ ಶಿಂಧೆ ಮಾತನಾಡಿ, ಪ್ರಜಾಪ್ರಭುತ್ವ ಎಂದರೆ ಕೇವಲ ಚುನಾವಣೆ ಅಥವಾ ಸರ್ಕಾರ ರಚನೆಯಷ್ಟೇ ಅಲ್ಲ; ಅದು ಜನರ ಪಾಲ್ಗೊಳ್ಳುವಿಕೆ, ಸಮಾನತೆ, ಸ್ವಾತಂತ್ರ್ಯ, ನ್ಯಾಯ, ಬಂಧುತ್ವ ಹಾಗೂ ಜವಾಬ್ದಾರಿಯುತ ಆಡಳಿತದ ವ್ಯವಸ್ಥೆಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಭೀಮರಾಯನ ಗುಡಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಾಬು ಹೊನ್ನನಾಯ್ಕ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಂಜಯ್ ಮಠಪತಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠಲ್‌ರಾವ್, ಅಪರ ಜಿಲ್ಲಾಧಿಕಾರಿ ಸುರೇಖಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ. ಯೊಗೀಶ್ ಎಸ್.ಬಿ ಸೆರಿದಂತೆ ವಿವಿಧ ಸಮಾಜದ ಮುಖಂಡರು, ಸಂಘದ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.






