ಜು.1ರಿಂದ ವಿಬಿ-ಜಿ ರಾಮ್ ಜೀ ಯೋಜನೆ ಜಾರಿ: ಸಜ್ಜಾಗುವಂತೆ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೀದರ್: ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ)ಯನ್ನು ಜುಲೈ 1ರಿಂದ ‘ವಿಬಿ-ಜಿ ರಾಮ್ ಜೀ’ ಎಂಬ ಹೊಸ ರೂಪದಲ್ಲಿ ಜಾರಿಗೊಳಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ತುರ್ತು ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಬೀದರ್ ಜಿಲ್ಲೆಯಲ್ಲಿ ವಾಡಿಕೆಯ ಮುಂಗಾರು ಮಳೆ ಕೊರತೆಯಾಗಿರುವುದರಿಂದ ಮನರೇಗಾ ಅಡಿ ಉದ್ಯೋಗದ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಜುಲೈ 1ರಿಂದ ಹೊಸ ಯೋಜನೆ ಜಾರಿಯಾಗಲಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಂಪೂರ್ಣ ಸನ್ನದ್ಧರಾಗಬೇಕು ಎಂದು ನಿರ್ದೇಶನ ನೀಡಿದರು.
ಮಳೆಯ ಕೊರತೆಯಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ಯಾವುದೇ ತೊಂದರೆಯಾಗದಂತೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮಳೆ ಕೊರತೆಯ ಸಂದರ್ಭದಲ್ಲಿ ಯಾವ ಬೆಳೆಗಳನ್ನು ಬೆಳೆಯಬೇಕು ಎಂಬ ಕುರಿತು ಕೃಷಿ ಅಧಿಕಾರಿಗಳು ರೈತರಿಗೆ ಸಮರ್ಪಕ ಮಾರ್ಗದರ್ಶನ ನೀಡಬೇಕು. ರೈತರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಕುಡಿಯುವ ನೀರಿಗೆ ಹಣದ ಕೊರತೆ ಇಲ್ಲ :
ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಬಾವಿಗಳು, ಕೊಳವೆ ಬಾವಿಗಳು ಸೇರಿದಂತೆ ಪರ್ಯಾಯ ಜಲಮೂಲಗಳನ್ನು ಗುರುತಿಸಬೇಕು. ಟ್ಯಾಂಕರ್ ಮಾಲೀಕರೊಂದಿಗೆ ಸಮನ್ವಯ ಸಾಧಿಸಿ ನೀರಿನ ಲಭ್ಯತೆ ಖಚಿತಪಡಿಸಿಕೊಳ್ಳಬೇಕು. ನೀರಿನ ಗುಣಮಟ್ಟ ಪರೀಕ್ಷಿಸಿ ಬಾವಿ ಮಾಲೀಕರೊಂದಿಗೆ ಒಡಂಬಡಿಕೆ ಮಾಡಿಕೊಂಡು ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ರೈತರ ಹಿತಾಸಕ್ತಿ, ಕುಡಿಯುವ ನೀರಿನ ಲಭ್ಯತೆ ಹಾಗೂ ಗ್ರಾಮೀಣ ಅಭಿವೃದ್ಧಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು. ಮಳೆ ಕೊರತೆಯ ಸಂಕಷ್ಟದ ಸಂದರ್ಭದಲ್ಲಿ ರೈತರು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಬಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಇತರರು ಇದ್ದರು.






