ಅರ್ಹ ಮತದಾರರ ನೋಂದಾಯಿತರ ಸಂಖ್ಯೆ ಹೆಚ್ಚಾಗಲಿ : ಜಹೀರಾ ನಸೀಮ್

ಬೀದರ್ : ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಚುನಾವಣೆಯ ಅರ್ಹ ಮತದಾರರ ನೋಂದಾಯಿತರ ಸಂಖ್ಯೆ ಹೆಚ್ಚಾಗಲಿ ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ಅವರು ತಿಳಿಸಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2026ನೇ ಸಾಲಿನಲ್ಲಿ ಜರುಗುವ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಚುನಾವಣೆ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳುವ ಕುರಿತು ಕರೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೀದರ ಜಿಲ್ಲೆಯಲ್ಲಿ ಅರ್ಹ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಯು ನಿಧಾನ ಗತಿಯಲ್ಲಿ ಸಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಪ್ರೌಢ ಶಾಲೆ, ಪದವಿ ಪೂರ್ವ, ಪದವಿ, ನರ್ಸಿಂಗ್, ಇಂಜಿನೀಯರಿಂಗ್ ಕಾಲೇಜು, ವಿಶ್ವವಿದ್ಯಾಲಯ ಸೇರಿದಂತೆ ಎಲ್ಲಾ ಕಡೆಗೆ ಹೋಗಿ ಅರ್ಹರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವಂತೆ ಮಾಡಬೇಕು ಎಂದರು.
ತಹಸಿಲ್ದಾರರು ತಾಲೂಕು ಮಟ್ಟದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನೋಂದಣಿ ಬಗ್ಗೆ ಇರುವ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಹಾಗೂ ವೇಗದ ಗತಿಯಲ್ಲಿ ನೋಂದಣಿ ಪ್ರಕ್ರಿಯೆಯಾಗಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಗಿರೀಶ್ ಬದೋಲೆ, ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ, ಮಹಾನಗರ ಪಾಲಿಕೆ ಆಯುಕ್ತೆ ರಮ್ಯಾ ರಂಗನಾಥ್, ಬೀದರ ಸಹಾಯಕ ಆಯುಕ್ತ ಮೊಹಮದ್ ಶಕೀಲ್, ಬಸವಕಲ್ಯಾಣ ಸಹಾಯಕ ಆಯುಕ್ತ ಮುಕುಲ್ ಜೈನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ್, ಮಾಸ್ಟರ್ ಟ್ರೈನರ್ ಗೌತಮ್ ಅರಳಿ, ಜಿಲ್ಲೆಯ ಎಲ್ಲಾ ತಾಲೂಕುಗಳ ತಹಸಿಲ್ದಾರರು, ತಾಲೂಕು ಪಂಚಾಯತ್ ಇಓಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಚುನಾವಣೆ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.







