ಚಾಮರಾಜನಗರ : ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಬಳಿದ ಆರೋಪ; ಯುವಕನಿಗೆ ಥಳಿಸಿದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಯುವಕನೊಬ್ಬ ಸಗಣಿ ಬಳಿಯುತ್ತಿರುವಾಗ ಸಾರ್ವಜನಿಕರಿಗೆ ಸಿಕ್ಕಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಮಸಣಾಪುರ ಗ್ರಾಮದಲ್ಲಿ ರವಿವಾರ ಮುಂಜಾನೆ 4.30ರ ವೇಳೆಗೆ ನಡೆದಿದೆ.
ತಾಲೂಕಿನ ಮಸಣಾಪುರ ಗ್ರಾಮದ ಉಪ್ಪಾರ ಸಮುದಾಯದ ಚಂದ್ರು ಎಂಬಾತ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಬಳಿಯುತ್ತಿರುವ ವೇಳೆ ಸಾರ್ವಜನಿಕರ ಗಮನಕ್ಕೆ ಬಂದಿದ್ದು, ಆತನನ್ನು ಹಿಡಿದ ಗ್ರಾಮಸ್ಥರು ಸಮೀಪದ ವಿದ್ಯುತ್ ಕಂಬಕ್ಕೆ ಕಟ್ಟಿ ಚಪ್ಪಲಿ ಹಾರ ಹಾಕಿ ಥಳಿಸಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಮಸಣಾಪುರ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಇಂತಹ ಕೃತ್ಯಗಳು ಮರುಕಳಿಸದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್ ಭೇಟಿ ನೀಡಿ ಘಟನೆಯ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.
ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿರುವ ಬಗ್ಗೆ ದಲಿತ ಸಮುದಾಯದ ಯುವಕರು ಹಾಗೂ ಸಾರ್ವಜನಿಕರು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.






