Hanur | ಭಾರೀ ಮಳೆಗೆ ಕೊಚ್ಚಿ ಹೋದ ತಾತ್ಕಾಲಿಕ ರಸ್ತೆ : 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನಾದ್ಯಂತ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಬಂಡಳ್ಳಿ ಮುಖ್ಯ ರಸ್ತೆಯ ಚಂಗವಾಡಿ ಗ್ರಾಮದ ಬಳಿ ನಿರ್ಮಿಸಲಾಗಿದ್ದ ತಾತ್ಕಾಲಿಕ ರಸ್ತೆ ಕೊಚ್ಚಿ ಹೋಗಿದ್ದು 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತವಾಗಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಚಂಗವಾಡಿ ಬಳಿ ಹಳ್ಳಕ್ಕೆ ಹೊಸ ಸೇತುವೆ ನಿರ್ಮಿಸುವ ಕಾಮಗಾರಿ ಇತ್ತೀಚೆಗೆ ಆರಂಭಿಸಲಾಗಿತ್ತು. ಹಳೆಯ ಸೇತುವೆಯನ್ನು ತೆರವುಗೊಳಿಸಿ ಮೇಲ್ದರ್ಜೆಗೇರಿಸುವ ಉದ್ದೇಶದಿಂದ ಸೇತುವೆಯ ಪಕ್ಕದಲ್ಲಿ ದೊಡ್ಡ ಪೈಪ್‍ಗಳನ್ನು ಅಳವಡಿಸಿ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿತ್ತು. ರಾತ್ರಿ ಸುರಿದ ಭಾರಿ ಮಳೆಯಿಂದ ಹಳ್ಳದಲ್ಲಿ ನೀರಿನ ಹರಿವು ಏಕಾಏಕಿ ಹೆಚ್ಚಾಗಿದೆ. ನೀರಿನ ರಭಸಕ್ಕೆ ತಾತ್ಕಾಲಿಕ ರಸ್ತೆ ಕೊಚ್ಚಿಹೋಗಿದ್ದು, ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಪರಿಣಾಮ ಚಂಗವಾಡಿ ಸೇರಿದಂತೆ ಸುತ್ತಮುತ್ತಲಿನ 10ಕ್ಕೂ ಹೆಚ್ಚು ಗ್ರಾಮಗಳ ಜನರು ಸಂಚಾರಕ್ಕೆ ಪರದಾಡುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಪರ್ಯಾಯ ರಸ್ತೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.




