ರಾಜ್ಯದ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಸಾಧ್ಯವಿಲ್ಲ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ: ಕರ್ನಾಟಕದ ಸರಕಾರಿ ಶಾಲೆಗಳಲ್ಲಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸಬೇಕು ಎನ್ನುವ ಕೇರಳ ಸರ್ಕಾರದ ಧೋರಣೆಯನ್ನು ರಾಜ್ಯ ಸರ್ಕಾರ ಮತ್ತು ಜನತೆ ತೀವ್ರವಾಗಿ ವಿರೋಧಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದರು.
ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ 'ವಿಶ್ವ ರೈತ ದಿನಾಚರಣೆ' ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇರಳ ಮುಖ್ಯಮಂತ್ರಿಗಳು ನೀಡಿರುವ ಈ ಸಲಹೆ ಸರಿಯಲ್ಲ. ನಮ್ಮ ರಾಜ್ಯದ ಶಾಲೆಗಳಲ್ಲಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸಲು ಸಾಧ್ಯವೇ ಇಲ್ಲ ಎಂಬುದು ಸರ್ಕಾರದ ದೃಢ ನಿಲುವು ಎಂದು ಸ್ಪಷ್ಟಪಡಿಸಿದರು.
ಗುಡ್ಡಗಾಡು ಪ್ರದೇಶದ ವಿದ್ಯಾರ್ಥಿಗಳು ಶಾಲೆಗೆ ತೆರಳಲು ರಸ್ತೆ ಮತ್ತು ಬಸ್ ಸೌಕರ್ಯವಿಲ್ಲದೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, "ಈ ಭಾಗದ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲಾಗುವುದು. ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಕೆಎಸ್ಆರ್ಟಿಸಿ (KSRTC) ಅಧಿಕಾರಿಗಳೊಂದಿಗೆ ಮಾತನಾಡಿ ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ನಾಲ್ಕು ವರ್ಷಗಳ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದ ಕುರಿತು ಮಾತನಾಡಿದ ಅವರು, ದುರಂತದಲ್ಲಿ ಮೃತಪಟ್ಟ 32 ಮಂದಿಯ ಕುಟುಂಬಸ್ಥರಿಗೆ ಜನವರಿ 26ರೊಳಗೆ ಉದ್ಯೋಗದ ನೇಮಕಾತಿ ಪತ್ರ ನೀಡಲಾಗುವುದು. ತನಿಖಾ ವರದಿಯ ಆಧಾರದ ಮೇಲೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸರ್ಕಾರ ಶೀಘ್ರದಲ್ಲೇ ಕಾನೂನು ಕ್ರಮ ಜರುಗಿಸಲಿದೆ ಎಂದರು.







